ಮಂಗಳೂರು, ಆ. 25 (DaijiworldNews/TA): ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆಕಾಣಲು ಸಜ್ಜಾಗಿದೆ. ಸಿನಿಮಾ ಬಿಡುಗಡೆಗೆ ಮುನ್ನ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ.

‘ಟಾಕ್ಸಿಕ್’ ಚಿತ್ರದ ಬಿಡುಗಡೆ ಹಿನ್ನೆಲೆಯಲ್ಲಿ ನಟ ಯಶ್ ಅವರು ತಮಿಳುನಾಡಿನ ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಬಳಿಕ ಅಲ್ಲಿಂದ ನೇರವಾಗಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ತೆರಳಿದ್ದಾರೆ.
ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು, ‘ಟಾಕ್ಸಿಕ್’ ಸಿನಿಮಾ ಭರ್ಜರಿ ಯಶಸ್ಸು ಕಾಣಲಿ ಎಂದು ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಯಶ್ ತಮ್ಮ ಸಿನಿಮಾಗಳ ಬಿಡುಗಡೆಗೂ ಮುನ್ನ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ ಪಡೆಯುವುದನ್ನು ರೂಢಿಸಿಕೊಂಡಿದ್ದಾರೆ. ಇದೀಗ ‘ಟಾಕ್ಸಿಕ್’ ಚಿತ್ರದ ಬಿಡುಗಡೆಗೂ ಮುನ್ನವೂ ಇದೇ ಸಂಪ್ರದಾಯವನ್ನು ಮುಂದುವರಿಸಿದ್ದಾರೆ.
ಆಗಸ್ಟ್ 26ರಂದು ‘ಟಾಕ್ಸಿಕ್’ ವಿಶ್ವದಾದ್ಯಂತ ತೆರೆಕಾಣಲಿದ್ದು, ಚಿತ್ರಕ್ಕಾಗಿ ಯಶ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾ ಬಿಡುಗಡೆಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಭೇಟಿ ನೀಡಿರುವುದು ಅಭಿಮಾನಿಗಳ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದೆ.