ವಾಷಿಂಗ್ಟನ್, ಆ. 03 (DaijiworldNews/TA): ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ, ಅಮೆರಿಕ ಮತ್ತು ಇರಾನ್ ನಡುವಿನ ಮಹತ್ವದ ರಾಜತಾಂತ್ರಿಕ ಮಾತುಕತೆಗಳು ಇಂದಿನಿಂದ ಆರಂಭವಾಗಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಇದೇ ವೇಳೆ ಇರಾನ್ನ ಇಂಧನ ಮೂಲಸೌಕರ್ಯಗಳ ಮೇಲೆ ನಡೆಸಲು ಉದ್ದೇಶಿಸಿದ್ದ ಮಿಲಿಟರಿ ದಾಳಿಯನ್ನು ಅಮೆರಿಕ ತಾತ್ಕಾಲಿಕವಾಗಿ ಮುಂದೂಡಿದ್ದು, ಶಾಂತಿ ಮಾತುಕತೆಗೆ ಆದ್ಯತೆ ನೀಡಿದೆ.

ಏರ್ ಫೋರ್ಸ್ ಒನ್ ವಿಮಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, "ನಮ್ಮ ಉದ್ದೇಶ ಅನಗತ್ಯವಾಗಿ ಜನರ ಜೀವ ತೆಗೆಯುವುದಲ್ಲ. ರಾಜತಾಂತ್ರಿಕ ಮಾತುಕತೆಗೆ ಅವಕಾಶ ನೀಡಿದ್ದೇವೆ. ಅದರ ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದು ನೋಡಬೇಕು" ಎಂದು ಹೇಳಿದ್ದಾರೆ. ಇರಾನ್ ವಿರುದ್ಧ ಭಾನುವಾರ ನಡೆಸಲು ಉದ್ದೇಶಿಸಿದ್ದ ಬೃಹತ್ ಮಿಲಿಟರಿ ಕಾರ್ಯಾಚರಣೆಯನ್ನು ಅಮೆರಿಕ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್, ಕತಾರ್ ಹಾಗೂ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಾಯಕರು ಟ್ರಂಪ್ ಅವರೊಂದಿಗೆ ನಡೆಸಿದ ಮಾತುಕತೆಯಲ್ಲಿ ಯುದ್ಧದ ಬದಲು ರಾಜತಾಂತ್ರಿಕ ಪರಿಹಾರಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದರು. ಯುದ್ಧ ತೀವ್ರಗೊಂಡರೆ ಗಲ್ಫ್ ಪ್ರದೇಶದ ಆರ್ಥಿಕತೆ ಮತ್ತು ಜಾಗತಿಕ ಇಂಧನ ಪೂರೈಕೆಗೆ ಭಾರೀ ಹೊಡೆತ ಬೀಳಲಿದೆ ಎಂಬ ಆತಂಕವನ್ನು ಅವರು ವ್ಯಕ್ತಪಡಿಸಿದ್ದರು.
ಮಾತುಕತೆಯ ಪ್ರಮುಖ ಉದ್ದೇಶಗಳಲ್ಲಿ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯಲ್ಲಿ ಮುಕ್ತ ನೌಕಾಯಾನವನ್ನು ಪುನಃ ಸ್ಥಾಪಿಸುವುದು ಹಾಗೂ ಇರಾನ್ನ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಷಯಗಳಿಗೆ ಪರಿಹಾರ ಕಂಡುಕೊಳ್ಳುವುದು ಸೇರಿದೆ. ಇರಾನ್ ವಿದೇಶಾಂಗ ಸಚಿವಾಲಯ, ಹಾರ್ಮುಜ್ ಜಲಸಂಧಿಯ ಪರಿಸ್ಥಿತಿ ಯುದ್ಧಕ್ಕೂ ಮುಂಚಿನ ಸ್ಥಿತಿಗೆ ತಕ್ಷಣವೇ ಮರಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಜಲಸಂಧಿಯ ಭದ್ರತೆ ಮತ್ತು ನೌಕಾಯಾನ ವ್ಯವಸ್ಥೆ ಕುರಿತು ಓಮನ್ ದೇಶದೊಂದಿಗೆ ಪ್ರತ್ಯೇಕ ಮಾತುಕತೆಗಳು ನಡೆಯುತ್ತಿವೆ ಎಂದು ತಿಳಿಸಿದೆ.
ಕಳೆದ ಆರು ತಿಂಗಳಿಂದ ಇಸ್ರೇಲ್, ಅಮೆರಿಕ ಹಾಗೂ ಇರಾನ್ ಬೆಂಬಲಿತ ಪಡೆಗಳ ನಡುವಿನ ಸಂಘರ್ಷದಿಂದ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಅಡಚಣೆ ಉಂಟಾದ ಪರಿಣಾಮ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ, ಕಚ್ಚಾ ತೈಲದ ಬೆಲೆಗಳು ಏರಿಕೆಯಾಗಿದ್ದವು. ಈಗ ಆರಂಭವಾಗುತ್ತಿರುವ ರಾಜತಾಂತ್ರಿಕ ಮಾತುಕತೆಗಳು ಯಶಸ್ವಿಯಾದರೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಗ್ಗುವ ನಿರೀಕ್ಷೆ ವ್ಯಕ್ತವಾಗಿದ್ದು, ಜಾಗತಿಕ ಮಾರುಕಟ್ಟೆಗಳಲ್ಲೂ ಸಕಾರಾತ್ಮಕ ವಾತಾವರಣ ನಿರ್ಮಾಣವಾಗಿದೆ.