ಮಂಗಳೂರು, ಜೂ. 12 (DaijiworldNews/AA): ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 12ರಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
* ಪೋಷಕರು ಮಕ್ಕಳು ನೀರು ಇರುವ ತಗ್ಗು ಪ್ರದೇಶಗಳು, ಕೆರೆ, ಸಮುದ್ರ ತೀರ ಮತ್ತು ನದಿ ದಡಗಳಿಗೆ ಹೋಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ.
* ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
* ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಕಚೇರಿಯಲ್ಲಿ ಇರಬೇಕು. ಜೊತೆಗೆ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು.
* ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳು ಸದಾ ಜಾಗರೂಕರಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು. ಹಾಗೂ ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು.
* ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ ಅಥವಾ ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
* ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧವಾಗಿರಬೇಕು.
ತುರ್ತು ಸೇವೆ 24x7 ಲಭ್ಯವಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಟೋಲ್-ಫ್ರೀ ನಿಯಂತ್ರಣ ಕೊಠಡಿ ಸಂಖ್ಯೆ 1077, ದೂರವಾಣಿ ಸಂಖ್ಯೆ 0824-2442590 ಕರೆ ಮಾಡುವಂತೆ ತಿಳಿಸಲಾಗಿದೆ.