ಮಂಗಳೂರು, ಆ. 30 (DaijiworldNews/AA): ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ಆ. 30ರಂದು ರಜೆ ಘೋಷಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ ಪೋಷಕರು ತಮ್ಮ ಮಕ್ಕಳನ್ನು ನೀರಿರುವ ತಗ್ಗು ಪ್ರದೇಶ, ಬಾವಿ, ಕೆರೆ, ನದಿತೀರ ಮತ್ತು ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಜಾಗ್ರತೆ ವಹಿಸಬೇಕು.
ಭಾರೀ ಮಳೆಯ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನಗಳಲ್ಲಿ ಇರುವಂತೆ ಸೂಚಿಸಲಾಗಿದೆ. ಜಿಲ್ಲಾಡಳಿತದಿಂದ ನಿಯೋಜಿಸಲ್ಪಟ್ಟ ನೋಡಲ್ ಅಧಿಕಾರಿಗಳು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಸೂಚಿಸಲಾಗಿದೆ.
ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.