ಸುಳ್ಯ, ಜ. 10 (DaijiworldNews/TA): ವಿಧಾನ ಸಭಾ ಕ್ಷೇತ್ರ ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವವರ ವಿರುದ್ಧ ತಕ್ಷಣ ಕಾನೂನು ಕ್ರಮಕ್ಕೆ ಒತ್ತಾಯಿಸಿ ಸುಳ್ಯ ಬಿಜೆಪಿ ಮಂಡಲ ಸಮಿತಿ ನೇತೃತ್ವದಲ್ಲಿ ಸುಳ್ಯದ ಖಾಸಗಿ ಬಸ್ ನಿಲ್ದಾಣ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆ ಸಭೆಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ , ಶಾಸಕಿ ಭಾಗೀರಥಿ ಮುರುಳ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿರುವವರನ್ನು ಇನ್ನೂ ಪೊಲೀಸರು ಬಂಧಿಸಿಲ್ಲ ಶಾಸಕರ ಜನಪ್ರಿಯತೆಯನ್ನು ಸಹಿಸದೇ ಈ ರೀತಿ ಕ್ರತ್ಯ ಎಸಗಿದ್ದಾರೆ. ೨೪ ಗಂಟೆಯೊಳಗೆ ಆರೋಪಿಯನ್ನು ಬಂಧಿಸುವ ಕೆಲಸ ಮಾಡಬೇಕು. ತಪ್ಪಿದಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಮಾತನಾಡಿ, ಶಾಸಕರಿಗೆ ಅವಮಾನ ಮಾಡುವುದು ಸರಿಯಲ್ಲ. ಆರೋಪಿಯನ್ನು ತಕ್ಷಣ ಪೊಲೀಸ್ ಇಲಾಖೆ ಬಂಧಿಸಬೇಕು . ಸರಕಾರ ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು. ಈ ವೇಳೆ ಬಿಜೆಪಿ ಮುಖಂಡರಾದ SN ಮನ್ಮಥ, ವೆಂಕಟ್ ದಂಬೆಕೋಡಿ, ಸಂತೋಷ್ ಕುತ್ತಮೊಟ್ಟೆ, ಸುರೇಶ್ ಕಣೆಮರಡ್ಕ, ಚಂದ್ರಾ ಕೋಲ್ಟಾರ್, ಕೇಶವ ಅಡ್ತಲೆ, ಅಶೋಕ್ ಪೀಚೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.