ಕಾರ್ಕಳ, ಜ. 31 (DaijiworldNews/TA): ದೇಶದ ಕಟ್ಟಕಡೆಯ ವ್ಯಕ್ತಿಗೂ ನೇರವಾಗಿ ಲಾಭ ತಲುಪುವಂತಹ ಜನಪರ ಯೋಜನೆ ನರೇಗಾ ಆಗಿದ್ದು, ಕೇಂದ್ರದ ಯುಪಿಎ ಸರ್ಕಾರವು ಜನರ ಸಮಗ್ರ ಅಭಿವೃದ್ಧಿಯ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರಾಜಕೀಯ ಲಾಭಕ್ಕಾಗಿ ಈ ಯೋಜನೆಯ ಹೆಸರನ್ನೇ ಬದಲಾಯಿಸುವ ಮೂಲಕ ಜನಸಾಮಾನ್ಯರ ಮೇಲೆ ಗಧಾ ಪ್ರಹಾರ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಆರೋಪಿಸಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ “ಮನರೇಗಾ ಬಚಾವೋ ಸಂಗ್ರಾಮ್” ಆಂದೋಲನದ ಅಂಗವಾಗಿ ನಡೆದ ಗಾಂಧಿ ನಡಿಗೆ ಜಾಥಾ ಹಾಗೂ ಕಾರ್ಕಳ ತಾಲೂಕು ಕಚೇರಿ ಮುಂಭಾಗದಲ್ಲಿ ಆಯೋಜಿಸಿದ ಪ್ರತಿಭಟನಾ ಸಭೆ ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಮಾತನಾಡಿದರು.
ನಂತರ ಪ್ರತಿಭಟನಾಕಾರರು ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರರಿಗೆ ಮಹಾತ್ಮ ಗಾಂಧಿಯವರ ಭಾವಚಿತ್ರವನ್ನು ನೀಡಿ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಗೋಪಿನಾಥ್ ಭಟ್, ಶೇಖ್ ಶಬೀರ್, ಜಾರ್ಜ್ ಕ್ಯಾಸ್ಟಲಿನೊ, ಸುಧಾಕರ ಶೆಟ್ಟಿ ಮುಡಾರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.