ಉಡುಪಿ, ಫೆ. 18 (DaijiworldNews/AA): ಮುಂಬರುವ ವಾರ್ಷಿಕ ಪರೀಕ್ಷೆಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ತೊಂದರೆಯಾಗದಂತೆ ಪರೀಕ್ಷಾ ಅವಧಿಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಲೋಡ್ ಶೆಡ್ಡಿಂಗ್ ಮಾಡಬಾರದು ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರಿಗೆ ಮನವಿ ಮಾಡಿದ್ದಾರೆ.

"ಉಡುಪಿ ಜಿಲ್ಲೆಯು ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿದ್ದು, ಪ್ರತಿ ವರ್ಷ ಶೈಕ್ಷಣಿಕ ಫಲಿತಾಂಶದಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುತ್ತಿದೆ. ಜಿಲ್ಲೆಯಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳಿದ್ದು, ನೆರೆಹೊರೆಯ ಜಿಲ್ಲೆಗಳ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳ ಅಭ್ಯಾಸಕ್ಕೆ ನಿರಂತರ ವಿದ್ಯುತ್ ಪೂರೈಕೆ ಅತ್ಯಗತ್ಯ" ಎಂದು ಸಚಿವರಿಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖಿಸಿದ್ದಾರೆ.
"ಪ್ರಸ್ತುತ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಎಸ್ಎಸ್ಎಲ್ಸಿ ಅಂತಿಮ ಪರೀಕ್ಷೆಗಳ ಜೊತೆಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿವೆ" ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಪೂರಕವಾದ ವಾತಾವರಣವನ್ನು ನಿರ್ಮಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಈ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಸುವರ್ಣ ಅವರು ಮನವಿ ಮಾಡಿದ್ದಾರೆ. ಇದರೊಂದಿಗೆ, ಜಿಲ್ಲಾಧಿಕಾರಿಗಳು ಮತ್ತು ಮೆಸ್ಕಾಂ ಅಧಿಕಾರಿಗಳಿಗೂ ಜಿಲ್ಲೆಯಾದ್ಯಂತ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸುವಂತೆ ಅವರು ಕೋರಿದ್ದಾರೆ.