ಕುಂದಾಪುರ, ಮೇ. 17 (DaijiworldNews/AA): ಕೊಡಚಾದ್ರಿಯಿಂದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪ್ ಹಾಗೂ ಮೀನು ಸಾಗಾಟದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರವಾಸಿಗರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಅಪಘಾತ ಸಂಭವಿಸಿದ ತಕ್ಷಣ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಪ್ರವಾಸಿ ಜೀಪ್ ಕೊಡಚಾದ್ರಿಯಿಂದ ಕೊಲ್ಲೂರು ಕಡೆಗೆ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಜೀಪ್ ಸಂಪೂರ್ಣ ಜಖಂಗೊಂಡಿದ್ದು, ಹಲವು ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.
ಕುಂದಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಜ್ಯೋತಿ(35) ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆರ್ಯ ಅನೂಪ್ (28) ಮೃತಪಟ್ಟಿದ್ದಾರೆ.
ಅಪಘಾತದ ಬೆನ್ನಲ್ಲೇ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಕುಂದಾಪುರ ಮತ್ತು ಮಣಿಪಾಲದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ೮ ಮಂದಿ ಗಾಯಗೊಂಡಿದ್ದಾರೆ.
ಅಯನ್ (5), ಅವನಿ (8), ಅರ್ಜುನ್ (9), ಮಿನಿ (60), ಅಭಿ (36), ಅನೂಪ್ (37), ಜ್ಯೋತಿಷ್ (43) ಮತ್ತು ಜೀಪು ಚಾಲಕ ದೇವರಾಜ್ ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಾಳುಗಳು ಕೇರಳದ ಕೊಟ್ಟಾಯಂ ಮೂಲದವರು ಎಂದು ತಿಳಿದುಬಂದಿದೆ.
ಸ್ಥಳಕ್ಕೆ ವಿನಯ್ ಎಂ ಕೋರ್ಲಹಳ್ಳಿ, ಭೀಮಾಶಂಕರ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದು, ಮುಂದಿನ ಪ್ರಕ್ರಿಯೆಗಳ ಉಸ್ತುವಾರಿ ವಹಿಸಿದ್ದಾರೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.