ಮಂಗಳೂರು, ಜು. 18 (DaijiworldNews/AA): ಕರ್ನಾಟಕದ ಎರಡನೇ ಅತಿದೊಡ್ಡ ಕೈಗಾರಿಕಾ ಪ್ರದೇಶವಾಗಿರುವ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಗುರುವಾರ ಹಾಗೂ ಶುಕ್ರವಾರ ಸುರಿದ ಭಾರೀ ಮಳೆಯಿಂದ ಕೃತಕ ನೆರೆ ಉಂಟಾಗಿ ಹಲವು ಕೈಗಾರಿಕಾ ಘಟಕಗಳು ಜಲಾವೃತಗೊಂಡಿವೆ. ನೀರು ನುಗ್ಗಿದ ಪರಿಣಾಮ ಯಂತ್ರೋಪಕರಣಗಳು ಹಾಗೂ ಕಚ್ಚಾ ವಸ್ತುಗಳು ಹಾನಿಯಾಗಿ ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ.

ಈ ಸಮಸ್ಯೆ ಮರುಕಳಿಸಲು ಪ್ರಮುಖ ಕಾರಣ ಕೈಗಾರಿಕಾ ಪ್ರದೇಶದ ಸುತ್ತಮುತ್ತ ನಿರ್ಮಿಸಲಾಗಿರುವ ಮಳೆನೀರು ಹರಿವಿನ ಚರಂಡಿಗಳ ಅವೈಜ್ಞಾನಿಕ ನಿರ್ಮಾಣ ಹಾಗೂ ಸಮರ್ಪಕ ನಿರ್ವಹಣೆಯ ಕೊರತೆ. ಬೈಕಂಪಾಡಿ ಎಪಿಎಂಸಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಚರಂಡಿಗಳು ಕಸದಿಂದ ಮುಚ್ಚಿಹೋಗಿದ್ದು, ಸಮುದ್ರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ಚರಂಡಿಯನ್ನೂ ಸ್ವಚ್ಛಗೊಳಿಸಿಲ್ಲ. ಇದರಿಂದ ಮಳೆನೀರು ಸರಾಗವಾಗಿ ಹರಿದು ಹೋಗದೆ ಕೈಗಾರಿಕಾ ಘಟಕಗಳೊಳಗೆ ನುಗ್ಗುತ್ತಿದೆ ಎಂದು ಕೈಗಾರಿಕೋದ್ಯಮಿಗಳು ಆರೋಪಿಸಿದ್ದಾರೆ.
ಪ್ರತಿ ಮಳೆಗಾಲದಲ್ಲೂ ಇದೇ ರೀತಿಯ ಕೃತಕ ನೆರೆ ಉಂಟಾಗಿ ಕೈಗಾರಿಕೆಗಳಿಗೆ ಭಾರೀ ಆರ್ಥಿಕ ನಷ್ಟ ಉಂಟಾಗುತ್ತಿದೆ. ಈ ಸಮಸ್ಯೆಯನ್ನು ಹಲವು ಬಾರಿ ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದಿದ್ದರೂ, ಇದುವರೆಗೆ ಶಾಶ್ವತ ಪರಿಹಾರ ಕಲ್ಪಿಸುವ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಕೈಗಾರಿಕೋದ್ಯಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೃತಕ ನೆರೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಲು ಸರ್ಕಾರ ತಕ್ಷಣವೇ ಉನ್ನತ ಮಟ್ಟದ ತಂಡವನ್ನು ರಚಿಸಿ ಸ್ಥಳ ಪರಿಶೀಲನೆ ನಡೆಸಬೇಕು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೈಗಾರಿಕೋದ್ಯಮಿಗಳು ಆಗ್ರಹಿಸಿದ್ದಾರೆ.