ಮಂಗಳೂರು, ಸೆ. 03 (DaijiworldNews/AA): ನಗರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅನಧಿಕೃತ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ಆಯುಕ್ತರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಪಾದಚಾರಿ ಮಾರ್ಗಗಳು ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿರುವುದರಿಂದ ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ನಾಗರಿಕರು ಹಾಗೂ ವಿವಿಧ ಸಂಘಟನೆಗಳಿಂದ ಪಾಲಿಕೆಗೆ ಹಲವಾರು ದೂರುಗಳು ಬಂದಿವೆ ಎಂದು ತಿಳಿಸಲಾಗಿದೆ.
ಮಹಾನಗರ ಪಾಲಿಕೆಯಿಂದ ಅಧಿಕೃತವಾಗಿ ನೀಡಲಾಗಿರುವ ಬೀದಿ ವ್ಯಾಪಾರಿಗಳ ಗುರುತಿನ ಚೀಟಿ ಹಾಗೂ ವ್ಯಾಪಾರ ಪ್ರಮಾಣಪತ್ರ ಹೊಂದಿರುವ ವ್ಯಾಪಾರಿಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅನಧಿಕೃತ ವ್ಯಾಪಾರಿಗಳು ತಾವು ವ್ಯಾಪಾರ ನಡೆಸುತ್ತಿರುವ ಸ್ಥಳಗಳನ್ನು ಸ್ವಯಂಪ್ರೇರಿತವಾಗಿ ತೆರವುಗೊಳಿಸಬೇಕು ಎಂದು ಪಾಲಿಕೆ ಸ್ಪಷ್ಟಪಡಿಸಿದೆ.
ಅನಧಿಕೃತ ವ್ಯಾಪಾರಿಗಳು ಸ್ವಯಂಪ್ರೇರಿತವಾಗಿ ಸ್ಥಳ ತೆರವುಗೊಳಿಸಲು ವಿಫಲರಾದರೆ, ಬೀದಿ ವ್ಯಾಪಾರಿಗಳ ಕಾಯ್ದೆಯ ನಿಯಮಗಳ ಅನ್ವಯ ಅವರನ್ನು ತೆರವುಗೊಳಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಂಸಿಸಿ ಎಚ್ಚರಿಕೆ ನೀಡಿದೆ.