ಮಂಗಳೂರು, ಸೆ. 07 (DaijiworldNews/TA): ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರಕಾರ ವಿಶೇಷ ಒತ್ತು ನೀಡಿದ್ದು, ನದಿ ಪ್ರವಾಸೋದ್ಯಮ, ಕ್ರೂಸ್, ಹೌಸ್ಬೋಟ್, ಬೀಚ್ ಪ್ರವಾಸೋದ್ಯಮ, ವಾಟರ್ ಸ್ಪೋರ್ಟ್ಸ್ ಹಾಗೂ ಸ್ಥಳೀಯ ಸಮುದಾಯ ಆಧಾರಿತ ಪ್ರವಾಸೋದ್ಯಮವನ್ನು ಪರಸ್ಪರ ಜೋಡಿಸುವ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾ ಗುವುದು ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಮಂಗಳೂರಿನ ವಿವಿಧ ಪ್ರವಾಸಿ ತಾಣಗಳಿಗೆ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ತಣ್ಣೀರುಬಾವಿ ‘ಬ್ಲೂ ಫ್ಲ್ಯಾಗ್’ ಕಡಲತೀರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ನೇತ್ರಾವತಿ ನದಿ, ತಣ್ಣೀರುಬಾವಿ ಬ್ಲೂ ಫ್ಲ್ಯಾಗ್ ಬೀಚ್, ಕರಾವಳಿ ಪ್ರದೇಶಗಳು ಹಾಗೂ ನ್ಯೂ ಮಂಗಳೂರು ಬಂದರಿನ ಪ್ರವಾಸೋದ್ಯಮ ಸಾಮರ್ಥ್ಯದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವ ಜಾರ್ಜ್ ಅವರು ನೇತ್ರಾವತಿಯಲ್ಲಿ ರಿವರ್ ಕ್ರೂಸ್, ಹೌಸ್ಬೋಟ್ ನೇತ್ರಾವತಿ ನದಿಯಲ್ಲಿ ರಿವರ್ ಕ್ರೂಸ್ ಹಾಗೂ ಹೌಸ್ಬೋಟ್ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗುತ್ತಿದೆ. ಈ ಯೋಜನೆಗಳಲ್ಲಿ ಸ್ಥಳೀಯ ಮೀನುಗಾ ರರು ಮತ್ತು ಕರಾವಳಿ ಸಮುದಾಯದ ಜನರನ್ನು ಸಕ್ರಿಯವಾಗಿ ತೊಡಗಿಸಿಕೊಂಡು, ಅವರಿಗೆ ಹೊಸ ಉದ್ಯೋಗ ಮತ್ತು ಆದಾಯದ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶ ಹೊಂದಲಾಗಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಾಜಿ ಶಾಸಕ ಜೆ.ಆರ್. ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.