ಮಂಗಳೂರು, ಜ 15 (Daijiworld News/MSP): ಕೇಂದ್ರ ಸರ್ಕಾರವೂ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಸಹಯೋಗದೊಂದಿಗೆ ಬುಧವಾರ ಮಧ್ಯಾಹ್ನ 2.30 ಕ್ಕೆ ನಡೆಯುತ್ತಿರುವ ಸಮಾವೇಶಕ್ಕೆ ಆಗಮಿಸುವ ಹೊರರಾಜ್ಯದವರಿಗೆ ನಿಷೇಧ ಹೇರಲಾಗಿದೆ.

ಗಡಿಭಾಗದಲ್ಲಿ ಇದಕ್ಕಾಗಿ ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು ಪ್ರತಿಯೊಬ್ಬರನ್ನು ಪರಿಶೀಲನೆ ಮಾಡಿ ಜಿಲ್ಲೆಗೆ ಪ್ರವೇಶ ಅವಕಾಶ ನೀಡಲಾಗುತ್ತಿದೆ. ಪೊಲೀಸರ ಬಿಗಿ ಬಂದೋಬಸ್ತ್ ಹಿನ್ನಲೆಯಲ್ಲಿ ಕೇರಳ ರಾಜ್ಯದಿಂದ ಪ್ರತಿಭಟನಕಾರರು ದೋಣಿ ಮೂಲಕ ಆಗಮಿಸುತ್ತಿದ್ದಾರೆ ಎಂಬ ಮಾಹಿತಿ ದೊರಕಿದೆ.
ಮುಸ್ಲಿಂ ಸೆಂಟ್ರಲ್ ಕಮಿಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು ಒಟ್ಟು 33ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ.ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇರುವುದರಿಂದ ಈ ಬೃಹತ್ ಸಮಾವೇಶದ ಮೇಲೆ ಖಾಕಿ ಹದ್ದಿನ ಕಣ್ಣಿಟ್ಟಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರಿಕೆ ವಹಿಸಿರುವ ಪೊಲೀಸ್ ಇಲಾಖೆ ಮಂಗಳೂರಿನ ಹಲವಡೆಗೆ ಬಿಗಿ ಭದ್ರತೆಯನ್ನು ನಿಯೋಜಿಸಿದೆ. ಇನ್ನು ಪ್ರತಿಭಟನೆ ಹಿನ್ನೆಲೆಯಲ್ಲಿ ಬೆಳಗ್ಗೆ 8ರಿಂದ ರಾತ್ರಿ 10ವರೆಗೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರವನ್ನೂ ಮಾರ್ಪಡು ಮಾಡಲಾಗಿದೆ.