ಕೋಲ್ಕತ್ತಾ, ಏ.30 (DaijiworldNews/AA): ಕೋಲ್ಕತ್ತಾದ ಬುರ್ರಾಬಜಾರ್ನಲ್ಲಿರುವ ಹೋಟೆಲ್ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 14 ಮಂದಿ ಸಜೀವ ದಹನವಾಗಿದ್ದಾರೆ ಎಂದು ವರದಿಯಾಗಿದೆ.

ಅಗ್ನಿ ಅವಘಡದಲ್ಲಿ ಹಲವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕೋಲ್ಕತ್ತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ಮಾಹಿತಿ ನೀಡಿದ್ದಾರೆ.
ಹೋಟೆಲ್ನಲ್ಲಿ ರಾತ್ರಿ 8.30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿಯಿಂದ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಹೋಟೆಲ್ ಸಿಬ್ಬಂದಿಯೊಬ್ಬರು ಹಾರಿ ಮೃತಪಟ್ಟಿದ್ದಾರೆ. 14 ಶವಗಳನ್ನು ಹೊರತೆಗೆಯಲಾಗಿದೆ. ಹಲವಾರು ಜನರನ್ನು ರಕ್ಷಿಸಲಾಗಿದೆ. ತನಿಖೆಗಾಗಿ ವಿಶೇಷ ತಂಡವನ್ನು ಸಹ ರಚಿಸಲಾಗಿದೆ. ಘಟನೆಯ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸಚಿವ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್, ಸಂತ್ರಸ್ತರಿಗೆ ಅಗತ್ಯ ಚಿಕಿತ್ಸಾ ನೆರವು ನೀಡುವಂತೆ ನಿದೇಶಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ದುರಂತ ಘಟನೆಗಳನ್ನು ತಡೆಗಟ್ಟಲು ಅಗ್ನಿ ಸುರಕ್ಷತಾ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕೆಂದು ಹೇಳಿದ್ದಾರೆ.