ಬೆಂಗಳೂರು, ಜೂ. 07 (DaijiworldNews/AK): ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಬೆನ್ನಲ್ಲೇ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದೆ.

ಐಪಿಎಸ್ ಶ್ರೇಣಿಯ ಕೆಲ ಅಧಿಕಾರಿಗಳ ವರ್ಗಾವಣೆಯಾಗಿದ್ದರೇ, ಕೆಲವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಪ್ರಸಾರ ಇಲಾಖೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಖಾಲಿಯಾದ ಗುಪ್ತಚರ ಇಲಾಖೆಯ ಎಡಿಜಿಪಿ ಹುದ್ದೆಗೆ ಎಸ್.ರವಿ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿರುವ ಆರ್.ಹಿತೇಂದ್ರ ಅವರಿಗೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿಯಾಗಿ ನೇಮಕ ಮಾಡುವ ಮೂಲಕ ಹೆಚ್ಚುವರಿ ಹೊಣೆ ನೀಡಲಾಗಿದೆ.
ಲಾಜಿಸ್ಟಿಕ್ಸ್ ಮತ್ತು ಮಾಡರ್ನೈಜೇಶನ್ ಎಡಿಜಿಪಿ ಆಗಿರುವ ಮುರುಗನ್ ಅವರಿಗೆ ನೇಮಕಾತಿ ವಿಭಾಗದ ಎಡಿಜಿಪಿಯಾಗಿ ಹೆಚ್ಚುವರಿ ಹುದ್ದೆ ನೀಡಲಾಗಿದೆ. ನೇಮಕಾತಿ ವಿಭಾಗದ ಎಡಿಜಿಪಿ ಆಗಿದ್ದ ಕೆ.ವಿ.ಶರತ್ ಚಂದ್ರ ಅವರನ್ನು ಪೊಲೀಸ್ ಪ್ರಿನ್ಸಿಪಲ್ ಸೆಕ್ರೆಟರಿ ಆಗಿ ವರ್ಗಾವಣೆ ಮಾಡಲಾಗಿದೆ. ಜೊತೆಗೆ, ಇವರಿಗೆ ಪೊಲೀಸ್ ಗೃಹ ನಿರ್ಮಾಣ ಮತ್ತು ಅಭಿವೃದ್ಧಿ ನಿಗಮದ ಎಡಿಜಿಪಿ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.
ಕಾಲ್ತುಳಿತ ಬೆನ್ನಲ್ಲೇ ಸರ್ಕಾರ ಕಬ್ಬನ್ ಪಾರ್ಕ್ ಕಬ್ಬನ್ ಪಾರ್ಕ್ ಉಪವಿಭಾಗ ಎಸಿಪಿ ಮತ್ತು ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿತ್ತು. ಖಾಲಿಯಾಗಿದ್ದ ಈ ಹುದ್ದೆಗಳಿಗೆ ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಅವರು ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಕಬ್ಬನ್ ಪಾರ್ಕ್ ಉಪವಿಭಾಗ ಎಸಿಪಿ ಆಗಿ ರಾಮಚಂದ್ರ ಮತ್ತು ಕಬ್ಬನ್ ಪಾರ್ಕ್ ಠಾಣೆ ಇನ್ಸ್ಪೆಕ್ಟರ್ ಆಗಿ ದೇವೇಂದ್ರಪ್ಪ ಅವರನ್ನು ಒಒಡಿ ಮೂಲಕ ನೇಮಕ ಮಾಡಿ ಕಮಿಷನರ್ ಆದೇಶ ಹೊರಡಿಸಿದ್ದಾರೆ.