ಬೆಂಗಳೂರು, ಜು. 10 (DaijiworldNews/AA): ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಡಾದಿಂದ ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ 14 ನಿವೇಶಗಳನ್ನು ಹಂಚಿಕೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೇಲ್ಮನವಿ ಸಲ್ಲಿಸಿದ್ದರು. ಈ ಮೇಲ್ಮನವಿ ಅರ್ಜಿ ವಿಚಾರಣೆಯು ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಗುರುವಾರ ನಡೆಯಿತು.
ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ನೋಟಿಸ್ ಜಾರಿಯಾಗದ ಹಿನ್ನೆಲೆಯಲ್ಲಿ ನೋಟಿಸ್ ಜಾರಿಯಾಗದ ಪ್ರತಿವಾದಿಗಳಿಗೆ ನೋಟಿಸ್ ನೀಡಲು ನ್ಯಾ. ವಿ.ಕಾಮೇಶ್ವರ ರಾವ್ ಹಾಗೂ ಸಿ.ಎಂ.ಜೋಶಿ ಅವರಿದ್ದ ಪೀಠ ಸೂಚನೆ ನೀಡಿದೆ. ಹಾಗೂ ವಿಭಾಗೀಯ ಪೀಠ ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ ೪ಕ್ಕೆ ಮುಂದೂಡಿ ಆದೇಶಿಸಿದೆ.
ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಈ ವಿಚಾರವಾಗಿ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಬಳಿಕ ಇಡಿ ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಇದರ ಬೆನ್ನಲ್ಲೇ ಪ್ರಕರಣ ದೊಡ್ಡ ವಿವಾದ ಸೃಷ್ಟಿಸಿತ್ತು, ಸಿಎಂ ಪತ್ನಿ ಪಾರ್ವತಿ ಸೈಟ್ಗಳನ್ನು ಮುಡಾಕ್ಕೆ ಹಿಂದಿರುಗಿಸಿದ್ದರು. ಉಳಿದಂತೆ, ಮುಡಾ ಹಗರಣದಲ್ಲಿನ ಹಣಕಾಸು ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಅಕ್ರಮವಾಗಿ ಹಂಚಿಕೆಯಾದ ಸೈಟ್ಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಸದ್ಯ ಇಡಿ ತನಿಖೆ ಪ್ರಗತಿಯಲ್ಲಿದೆ.