ಬೆಂಗಳೂರು, ಜು. 22 (DaijiworldNews/AK): ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೇ ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.
ದೊಡ್ಡ ಸಂಖ್ಯೆಯ ಸಾಕುಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ.
ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತಿಯ ಕ್ರಮವಹಿಸಲು ಸೂಚಿಸಿದ್ದಾರೆ.