ಬೆಂಗಳೂರು, ಆ. 08 (DaijiworldNews/TA): ರಾಹುಲ್ ಗಾಂಧಿ ನೇತೃತ್ವದ ಆರೋಪದ ವಿರುದ್ಧ ಬಿಜೆಪಿಯಲ್ಲೂ ಮತ್ತು ಜೆಡಿಎಸ್ನಲ್ಲೂ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನವಾಗಿದೆ ಎಂಬ ಗಂಭೀರ ಆರೋಪವನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆ. ಈ ಆರೋಪಕ್ಕೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಚುನಾವಣಾ ಆಯೋಗದ ಮೇಲಿನ ಅವಿಶ್ವಾಸ ಭಾವನೆಯಿಂದ ಪ್ರಜಾಪ್ರಭುತ್ವದ ಮೇಲೆ ವಿಷದ ಬೂದು ಎರಚಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ತಮ್ಮ ಹೇಳಿಕೆಯಲ್ಲಿ, ಮತ ಚಲಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೂ ಚುನಾವಣಾ ಆಯೋಗ ಬಿಜೆಪಿಯೊಂದಿಗೆ ಶಾಮೀಲಾಗಿದೆ ಎಂಬ ಆರೋಪ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, "ಚುನಾವಣಾ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಈ ರೀತಿಯ ಅವಿಶ್ವಾಸ ಹುಟ್ಟಿಸುವುದು ವಿಘಾತಕ." ಎಂದು ಪ್ರತಿಕ್ರಿಯಿಸಿದ್ದಾರೆ. "ಮತಗಳ್ಳತನಕ್ಕೆ ಮದ್ದು: ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡುವುದು. ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು" ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.