ಶ್ರೀನಗರ, ಅ. 04 (DaijiworldNews/TA): ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರನ್ನು ಶ್ರೀನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಕ್ಷದ ನಾಯಕರ ಮಾಹಿತಿಯ ಪ್ರಕಾರ, 87 ವರ್ಷದ ಅಬ್ದುಲ್ಲಾ ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಈ ವಾರದ ಆರಂಭದಲ್ಲೇ ಅವರಿಗೆ ಅಲ್ಸರ್ ಸಂಬಂಧಿತ ಸೋಂಕು ತಗುಲಿತ್ತು ಎನ್ನಲಾಗಿದೆ. ನ್ಯಾಷನಲ್ ಕಾನ್ಫರೆನ್ಸ್ನ ಹಿರಿಯ ನಾಯಕನೊಬ್ಬರು ನೀಡಿದ ಮಾಹಿತಿಯಲ್ಲಿ, "ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ," ಎಂದು ತಿಳಿಸಿದ್ದಾರೆ.
ಈ ವಾರದ ಆರಂಭದಲ್ಲಿ ಹೊಟ್ಟೆಯ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಶ್ರೀನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಫಾರೂಕ್ ಅವರ ಆರೋಗ್ಯ ಸರಿಯಾಗಿಲ್ಲದಿದ್ದರೂ, ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚೆಗೆ, ಪಹಲ್ಗಾಮ್ನಲ್ಲಿ ನಡೆದ ಮಾರಕ ಭಯೋತ್ಪಾದನೆಯ ಶಮನದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ಪುನರುಜ್ಜೀವನಗೊಳಿಸಿದ್ದಕ್ಕೆ ಅವರು ತಮ್ಮ ಮಗ ಒಮರ್ ಅಬ್ದುಲ್ಲಾ ಅವರ ಸರ್ಕಾರವನ್ನು ಶ್ಲಾಘಿಸಿದ್ದಾರೆ.