ಕೊಲ್ಕತ್ತಾ, ಮೇ. 08 (DaijiworldNews/TA): ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಐತಿಹಾಸಿಕ ಬೆಳವಣಿಗೆ ನಡೆದಿದೆ. ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಇದೀಗ ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದ್ದು, ಸುವೇಂದು ಅಧಿಕಾರಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದೆ. ಅವರು ನಾಳೆ (ಶನಿವಾರ) ಬೆಳಗ್ಗೆ 11 ಗಂಟೆಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮಮತಾ ಬ್ಯಾನರ್ಜಿ ವಿರುದ್ಧ ನಂದಿಗ್ರಾಮ ಹಾಗೂ ಭವಾನಿಪುರ ಎರಡೂ ಕ್ಷೇತ್ರಗಳಲ್ಲಿ ರಾಜಕೀಯವಾಗಿ ಭಾರೀ ಸವಾಲು ಹಾಕಿದ್ದ ಸುವೇಂದು ಅಧಿಕಾರಿ ಇದೀಗ ಬಂಗಾಳದಲ್ಲಿ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕನಾಗಿ ಹೊರಹೊಮ್ಮಿದ್ದಾರೆ. ಟಿಎಂಸಿ ಸರ್ಕಾರದ ವಿರುದ್ಧ ದೀರ್ಘಕಾಲ ಹೋರಾಟ ನಡೆಸಿದ್ದ ಅವರಿಗೆ ಇದೀಗ ಮುಖ್ಯಮಂತ್ರಿ ಪಟ್ಟ ಒಲಿದಿದೆ.
ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಆಗಮಿಸಿದ್ದರು. ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸಹಾಯಕ ವೀಕ್ಷಕರಾಗಿ ಸಭೆಯಲ್ಲಿ ಭಾಗವಹಿಸಿದರು. ಕೊಲ್ಕತ್ತಾದ ಬಿಸ್ವಾ ಬಾಂಗ್ಲಾ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಬಿಜೆಪಿ ಶಾಸಕರ ಸಭೆಯಲ್ಲಿ ಸುವೇಂದು ಅಧಿಕಾರಿಯ ಹೆಸರಿಗೆ ಏಕಮತದ ಬೆಂಬಲ ವ್ಯಕ್ತವಾಯಿತು.
ಸಭೆಯ ಬಳಿಕ ಮಾತನಾಡಿದ ಅಮಿತ್ ಶಾ, “ಮೊದಲಿಗೆ ಎಲ್ಲರೂ ಸುವೇಂದು ಅಧಿಕಾರಿ ಅವರ ಹೆಸರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಪ್ರಸ್ತಾಪಿಸಿದರು. ಎರಡನೇ ಹೆಸರಿಗಾಗಿ ಸಮಯ ನೀಡಲಾಗಿತ್ತು. ಆದರೆ ಯಾರೂ ಮತ್ತೊಬ್ಬರ ಹೆಸರನ್ನು ಸೂಚಿಸಲಿಲ್ಲ. ಹೀಗಾಗಿ ಸುವೇಂದು ಅಧಿಕಾರಿಯನ್ನು ಏಕಮತದಿಂದ ನಾಯಕನಾಗಿ ಆಯ್ಕೆ ಮಾಡಲಾಗಿದೆ” ಎಂದು ಹೇಳಿದರು.
ಬಂಗಾಳದ ಮೊದಲ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಸಮಾರಂಭ ಶನಿವಾರ ಬೆಳಗ್ಗೆ 11 ಗಂಟೆಗೆ ಕೊಲ್ಕತ್ತಾದ ಬ್ರಿಗೇಡ್ ಮೈದಾನದಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಧರ್ಮೇಂದ್ರ ಪ್ರಧಾನ್ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಲಿದ್ದಾರೆ.
ಇದರ ಜೊತೆಗೆ ಬಿಜೆಪಿ ಆಡಳಿತದ 20ಕ್ಕೂ ಹೆಚ್ಚು ರಾಜ್ಯಗಳ ಮುಖ್ಯಮಂತ್ರಿಗಳೂ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಎಲ್ಲಾ ರಾಜಕೀಯ ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವುದು ಪಕ್ಷದ ಪಾಲಿಗೆ ಐತಿಹಾಸಿಕ ಕ್ಷಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ದೊಡ್ಡ ತಿರುವಾಗಿ ಪರಿಗಣಿಸಲಾಗುತ್ತಿದೆ.