ನವದೆಹಲಿ,ಮೇ. 25(DaijiworldNews/AK):ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ನಿರಂತರ ಏರಿಕೆಯನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಹಣದುಬ್ಬರ ಮನುಷ್ಯ’ ಎಂದು ಕರೆದಿರುವ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಹಾಗೂ ಬೆಲೆ ಏರಿಕೆಯ ಬಿರುಗಾಳಿ ಬರಲಿದೆ ಎಂದು ನಾನು ಕೆಲವು ತಿಂಗಳುಗಳಿಂದ ಎಚ್ಚರಿಸುತ್ತಿದ್ದೆ. ಆದರೆ, ಮೋದಿ ಅವರು ಎಂದಿನಂತೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದರು. ಈಗ ಚುನಾವಣೆಗಳು ಮುಗಿಯುತ್ತಿದ್ದಂತೆ ಪೆಟ್ರೋಲ್-ಡೀಸೆಲ್ ಬೆಲೆಯನ್ನು ಬರೋಬ್ಬರಿ 8 ರೂ.ಗಳಷ್ಟು ಹೆಚ್ಚಿಸಲಾಗಿದೆ. ಚುನಾವಣೆಯ ಸಮಯದಲ್ಲಿ ದೊಡ್ಡ ದೊಡ್ಡ ಭರವಸೆಗಳನ್ನು ನೀಡುವುದು, ಆ ನಂತರದ ಸಮಯದಲ್ಲಿ ಜನರ ಜೇಬಿಗೆ ಕತ್ತರಿ ಹಾಕುವುದೇ ಈ ಸರ್ಕಾರದ ಕೆಲಸ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.