ಬೆಂಗಳೂರು, ಜೂ. 02 (DaijiworldNews/AA): ನಾಳೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣವಚನ ಸಮಾರಂಭವು ಲೋಕಭವನದಲ್ಲಿ ನಿಗದಿಯಾಗಿರುವುದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಜನಸಂದಣಿ ಹಾಗೂ ವಾಹನ ಸಂಚಾರ ದಟ್ಟಣೆ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ನಾಳೆ ಮಧ್ಯಾಹ್ನದಿಂದ ರಜೆ ಘೋಷಿಸಲಾಗಿದೆ.

ಇದೇ ವೇಳೆ, ಲೋಕಭವನಕ್ಕೆ ಆಹ್ವಾನಿತರಿಗೆ ಮಾತ್ರ ಪ್ರವೇಶವಿದ್ದು, ಸಾರ್ವಜನಿಕರು ಪ್ರವೇಶಿಸಲು ಅವಕಾಶವಿರುವುದಿಲ್ಲ. ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಕೆಲವು ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜೂನ್ 3 ನಾಳೆ ಸಂಜೆ 4:05 ಕ್ಕೆ ಕರ್ನಾಟಕ ಲೋಕಭವನದಲ್ಲಿ ನಡೆಯಲಿರುವ ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿಯ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ.
ಕಬ್ಬನ್ ರಸ್ತೆಯ ಬಿಆರ್ವಿ ಜಂಕ್ಷನ್ನಿಂದ ಸಿಟಿಒ ಜಂಕ್ಷನ್ವರೆಗೆ ಹಾಗೂ ಸಿಟಿಒ ವೃತ್ತದಿಂದ ಲೋಕಭವನದವರೆಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಿರುವ ವಾಹನಗಳನ್ನು ಹೊರತುಪಡಿಸಿ, ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ನಾಳೆ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಬೆಂಗಳೂರು ನಗರ ವ್ಯಾಪ್ತಿಯ ಪ್ರದೇಶದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.