ಶ್ರೀನಗರ, ಜೂ. 05 (DaijiworldNews/AA): ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಮೇಘ ಸ್ಫೋಟ ಸಂಭವಿಸಿ ಹಠಾತ್ ಜಲಪ್ರವಾಹ ಉಂಟಾಗಿದೆ. ಘಟನೆಯಿಂದ ಹಲವು ಮನೆಗಳಿಗೆ ಹಾನಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ರಿಯಾಸಿ ಜಿಲ್ಲೆಯ ಮಹೋರ್ ಉಪವಿಭಾಗದ ಬಥೋಯಿ ಗ್ರಾಮದಲ್ಲಿ ಗುರುವಾರ ತಡರಾತ್ರಿ ಮೇಘ ಸ್ಫೋಟ ಸಂಭವಿಸಿದೆ. ಭಾರೀ ಮಳೆಯೊಂದಿಗೆ ನೀರು ಏಕಾಏಕಿ ಗ್ರಾಮಕ್ಕೆ ನುಗ್ಗಿ ಹಲವು ಮನೆಗಳಿಗೆ ಹಾನಿಗೊಳಗಾಗಿವೆ.
ಮಾಹಿತಿ ತಿಳಿಯುತ್ತಿದ್ದಂತೆ ರಕ್ಷಣಾ ಮತ್ತು ಪರಿಹಾರ ತಂಡಗಳು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ಆರಂಭಿಸಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಭಾರೀ ಮಳೆಯಿಂದ ಜಾಮ್ಲಾನ್ ಸೇತುವೆ ಸಮೀಪ ನೀರಿನ ಮಟ್ಟ ಏರಿಕೆಯಾಗಿದ್ದು, ಕೆಲಕಾಲ ವಾಹನ ಸಂಚಾರ ಸ್ಥಗಿತಗೊಳಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಳೆದ ಮೂರು ದಿನಗಳಲ್ಲಿ ಜಮ್ಮು-ಪ್ರದೇಶದ ರಿಯಾಸಿ, ದೋಡಾ, ಕಿಶ್ತ್ವಾರ್ ಹಾಗೂ ಪೂಂಚ್ ಜಿಲ್ಲೆಗಳಲ್ಲಿ ಒಟ್ಟು ಐದು ಮೇಘ ಸ್ಫೋಟ ಪ್ರಕರಣಗಳು ವರದಿಯಾಗಿವೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಮುಂದಿನ ದಿನಗಳಲ್ಲೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ್ದು, ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.