ರಾವಲಕೋಟ್, ಜೂ. 09 (DaijiworldNews/AA): ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಭೀಕರ ಘರ್ಷಣೆಯಲ್ಲಿ ಕನಿಷ್ಠ 30 ಮಂದಿ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜೂನ್ 9ರಂದು ಜೆಎಎಸಿ ಕರೆ ನೀಡಿದ್ದ ಬಂದ್ಗೆ ಮುನ್ನವೇ ರಾವಲಕೋಟ್ನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಈ ನಡುವೆ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ಸಂಘಟನೆಯ ಕಾರ್ಯಕರ್ತನ ಮೃತದೇಹವನ್ನು ಇರಿಸಲಾಗಿದ್ದ ಆಸ್ಪತ್ರೆಯ ಶವಾಗಾರದ ಹೊರಗೆ ಸಾವಿರಾರು ಬೆಂಬಲಿಗರು ಜಮಾಯಿಸಿದ್ದರು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡು ಭಾರೀ ಘರ್ಷಣೆ ಉಂಟಾಗಿದೆ.
ಕಳೆದ ವಾರ ಪಾಕ್ ಆಕ್ರಮಿತ ಕಾಶ್ಮೀರದ ಆಡಳಿತವು ಭಯೋತ್ಪಾದನಾ ವಿರೋಧಿ ಕಾನೂನುಗಳ ಅಡಿಯಲ್ಲಿ ಜೆಎಎಸಿ ಸಂಘಟನೆಯನ್ನು ನಿಷೇಧಿಸಿತ್ತು. ಈ ಕ್ರಮದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಹಲವೆಡೆ ಪ್ರತಿಭಟನೆಗಳು ಆರಂಭಗೊಂಡಿದ್ದವು. ಘರ್ಷಣೆ ವೇಳೆ ನಾಲ್ವರು ಪೊಲೀಸ್ ಸಿಬ್ಬಂದಿ ಹಾಗೂ ಒಬ್ಬ ಪಾದಚಾರಿ ಸಾವನ್ನಪ್ಪಿದರೆ, ಭದ್ರತಾ ಕಾರ್ಯಾಚರಣೆಯಲ್ಲಿ ಆರು ಪ್ರತಿಭಟನಾಕಾರರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.