ಬೆಂಗಳೂರು, ಜೂ. 09 (DaijiworldNews/AK): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಉಚಿತ ಬಸ್ ಪ್ರಯಾಣ ಮಾಡುತ್ತಿರುವ ಮಹಿಳೆಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದ್ದು, ಶೀಘ್ರದಲ್ಲೇ ‘ಸ್ಮಾರ್ಟ್ ಕಾರ್ಡ್’ ವ್ಯವಸ್ಥೆ ಜಾರಿಯಾಗಲಿದೆ. ಈ ಹೊಸ ವ್ಯವಸ್ಥೆ ಜಾರಿಗೆ ಬಂದ ಬಳಿಕ ಬಸ್ ಪ್ರಯಾಣದ ವೇಳೆ ಆಧಾರ್ ಕಾರ್ಡ್ ಬದಲು ಸ್ಮಾರ್ಟ್ ಕಾರ್ಡ್ ತೋರಿಸಬೇಕು.

ರಾಜ್ಯದ ಮೂರು ಕೋಟಿಗೂ ಹೆಚ್ಚು ಮಹಿಳಾ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್ಗಳನ್ನು ಸರ್ಕಾರ ವಿತರಿಸಲಿದ್ದು, ಇದರಿಂದ ದಿನನಿತ್ಯ ನಿರ್ವಾಹಕರಿಗೆ ಭೌತಿಕ ಗುರುತಿನ ಚೀಟಿ ತೋರಿಸುವ ಗೊಂದಲಗಳು ನಿವಾರಣೆಯಾಗಲಿದೆ.
ಸೋಮವಾರ ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೈರತಿ ಸುರೇಶ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಶಕ್ತಿ’ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಹೇಳಿದರು.
ರಾಜ್ಯದ ಮೂರು ಕೋಟಿಗೂ ಅಧಿಕ ಜನರಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಮಹಿಳೆಯರಿಗೆ ಈ ಸ್ಮಾರ್ಟ್ ಕಾರ್ಡ್ಗಳನ್ನು ಉಚಿತವಾಗಿ ನೀಡಲಾಗುತ್ತದೆ. ಪುರುಷರು ಮೆಟ್ರೋ ಕಾರ್ಡ್ ಮಾದರಿಯಲ್ಲಿ ಶುಲ್ಕ ಪಾವತಿಸಿ ಕಾರ್ಡ್ ಪಡೆಯಬಹುದಾಗಿದೆ. ಕಾರ್ಡ್ನಲ್ಲಿರುವ ಮೊತ್ತ ಮುಗಿದ ಬಳಿಕ ಮರುರಿಚಾರ್ಜ್ ಮಾಡಿಕೊಳ್ಳುವ ವ್ಯವಸ್ಥೆಯೂ ಇರಲಿದೆ ಎಂದು ಮಾಹಿತಿ ನೀಡಿದರು.
ಮೂರು ಕೋಟಿಗೂ ಹೆಚ್ಚು ಸ್ಮಾರ್ಟ್ ಕಾರ್ಡ್ಗಳನ್ನು ಮುದ್ರಿಸಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರ ಟೆಂಡರ್ ಆಹ್ವಾನಿಸಲು ಸಿದ್ಧತೆ ನಡೆಸಿದೆ. ಪೈಲಟ್ ಯೋಜನೆಯಡಿ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವಿತರಣೆ ಪ್ರಕ್ರಿಯೆ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.