ಬೆಂಗಳೂರು, ಜೂ. 11 (DaijiworldNews/TA): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯುತ್ತಿದ್ದು, ಈ ಬೆಳವಣಿಗೆಯನ್ನು ಆಧರಿಸಿ ಜೆಡಿಎಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.

ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ರೂ. 2,000 ಸಹಾಯಧನ ಪಡೆಯುತ್ತಿರುವ ಫಲಾನುಭವಿಗಳಿಗೆ ಮುಂದಿನ ದಿನಗಳಲ್ಲಿ ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲವು ದಾಖಲೆಗಳ ಪರಿಶೀಲನೆ ಕಡ್ಡಾಯವಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಪ್ರಸ್ತುತ ರಾಜ್ಯದಲ್ಲಿ ಸುಮಾರು 1.30 ಕೋಟಿ ಮಹಿಳೆಯರು ಯೋಜನೆಯ ಲಾಭ ಪಡೆಯುತ್ತಿದ್ದು, ಅವರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಕಳೆದ ಐದು ತಿಂಗಳಿಂದ ಹಣ ವರ್ಗಾವಣೆಯಾಗಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಹಾಗೂ ಅನರ್ಹ ಪಾವತಿಗಳನ್ನು ತಡೆಯಲು ಕೆಲವು ನಿಯಮಗಳನ್ನು ಪರಿಷ್ಕರಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ.
ಈ ವಿಚಾರವನ್ನು ಮುಂದಿಟ್ಟುಕೊಂಡು ಜೆಡಿಎಸ್ ಸರ್ಕಾರವನ್ನು ಟೀಕಿಸಿದೆ. ಚುನಾವಣೆಗೆ ಮುನ್ನ ಯಾವುದೇ ಷರತ್ತುಗಳಿಲ್ಲದೆ ಪ್ರತಿ ಮನೆಯೊಡತಿಗೆ ರೂ. 2,000 ನೀಡುವುದಾಗಿ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ ಈಗ ಹೊಸ ನಿಯಮಗಳನ್ನು ಜಾರಿಗೆ ತರುವ ಮೂಲಕ ತನ್ನ ನೈಜ ಮುಖವನ್ನು ತೋರಿಸುತ್ತಿದೆ ಎಂದು ಆರೋಪಿಸಿದೆ.
ಜೆಡಿಎಸ್ ಪ್ರಕಟಣೆಯಲ್ಲಿ, “ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾವಿರಾರು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ. ಬಯೋಮೆಟ್ರಿಕ್, ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣಗಳನ್ನು ನೀಡಿ ಫಲಾನುಭವಿಗಳನ್ನು ಸಂಕಷ್ಟಕ್ಕೆ ಸಿಲುಕಿಸಲಾಗುತ್ತಿದೆ. ಬಡ ಮಹಿಳೆಯರ ಹಕ್ಕಿನ ಹಣವನ್ನು ತಡೆಯುವ ಪ್ರಯತ್ನ ನಡೆಯುತ್ತಿದೆ” ಎಂದು ಆರೋಪಿಸಲಾಗಿದೆ.
ಇನ್ನೂ ಮುಂದುವರಿದು, ಗೃಹಲಕ್ಷ್ಮಿ ಯೋಜನೆಯಲ್ಲಿನ ಬದಲಾವಣೆಗಳ ಕುರಿತು ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿರುವ ಜೆಡಿಎಸ್, “ಮಹಿಳಾ ಸಬಲೀಕರಣದ ಹೆಸರಿನಲ್ಲಿ ನೀಡಿದ ಭರವಸೆಗಳನ್ನು ಈಗ ಹಿಂದಕ್ಕೆ ಪಡೆಯುತ್ತಿರುವುದು ಸರಿಯಲ್ಲ. ಇದು ಮತಬ್ಯಾಂಕ್ ರಾಜಕಾರಣದ ಭಾಗವಾಗಿದ್ದು, ಸರ್ಕಾರ ಜನರಿಗೆ ಸ್ಪಷ್ಟ ಉತ್ತರ ನೀಡಬೇಕು” ಎಂದು ಆಗ್ರಹಿಸಿದೆ.
ಇದಕ್ಕೆ ಸರ್ಕಾರದ ಕಡೆಯಿಂದ ಇನ್ನೂ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ಆದರೆ ಯೋಜನೆಯ ಹಣ ಸರಿಯಾದ ಫಲಾನುಭವಿಗಳಿಗೆ ತಲುಪುವಂತೆ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದಲೇ ಪರಿಶೀಲನೆ ಮತ್ತು ನಿಯಮ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.