ಬೆಂಗಳೂರು, ಜೂ. 29 (DaijiworldNews/AA): ಮುಂದಿನ ಕೆಲವು ದಿನಗಳ ಕಾಲ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯವಾಗಿ ಕರಾವಳಿ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ.

ಕರಾವಳಿ ತೀರದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಹಾಗೂ ಗುಡುಗು ಮಿಂಚಿನ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಸಾರ್ವಜನಿಕರು ಮರಗಳ ಅಥವಾ ಹಳೆಯ ಕಟ್ಟಡಗಳ ಆಶ್ರಯ ಪಡೆಯದಂತೆ ತಿಳಿಸಲಾಗಿದೆ.
ಮುಂದಿನ ದಿನಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳಲಿದ್ದು, ಜೂನ್ ಅಂತ್ಯ ಹಾಗೂ ಜುಲೈ ಆರಂಭದ ದಿನಗಳಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.