ಬೆಂಗಳೂರು, ಜೂ. 29 (DaijiworldNews/AK): ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಪರಿಷ್ಕರಣೆಗೆ ಮುಂದಾಗಿದೆ. ಯೋಜನೆಯ ದುರ್ಬಳಕೆ ತಡೆಗಟ್ಟಲು ಮತ್ತು ಕೇವಲ ಅರ್ಹರಿಗೆ ಮಾತ್ರ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಮನೆ ಮನೆಗೆ ಹೊಸ ಅರ್ಜಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಆಯೋಜಿಸಲಾಗಿದ್ದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್ಗಳ ಒಕ್ಕೂಟದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. ರಾಜ್ಯದಲ್ಲಿ ಸುಮಾರು 1.64 ಕೋಟಿ ಜನರಿಗೆ ಗೃಹಜ್ಯೋತಿ ಸೌಲಭ್ಯ ನೀಡಲಾಗುತ್ತಿದ್ದು, ಇದರಲ್ಲಿ ವ್ಯಾಪಕ ದುರ್ಬಳಕೆಯಾಗುತ್ತಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಗ್ಯಾರಂಟಿ ಯೋಜನೆ ಕುರಿತು ಎಚ್ಚೆತ್ತುಕೊಂಡಿದೆ.
ನಮ್ಮ ರಾಜ್ಯದ ಜನರಿಗೆ ಮಾತ್ರ ಈ ಸೌಲಭ್ಯ ಸಿಗಬೇಕು. ಬದುಕಲು ಬಂದಿರುವ ಹೊರರಾಜ್ಯದವರಿಗೆ ಅಥವಾ ಇಲ್ಲಿನ ಮತದಾರರಲ್ಲದವರಿಗೆ ಇನ್ನು ಮುಂದೆ ಗೃಹಜ್ಯೋತಿ ಸೌಲಭ್ಯ ಸಿಗುವುದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಒಂದೇ ಹೆಸರಿನಲ್ಲಿ ಅಥವಾ ಒಂದಕ್ಕಿಂತ ಹೆಚ್ಚು ಕಡೆ ಡಬಲ್ ಗೃಹಜ್ಯೋತಿ ಸಂಪರ್ಕ ಹೊಂದಿದ್ದರೆ ಅದನ್ನು ತಕ್ಷಣವೇ ಕಡಿತಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಗೃಹಜ್ಯೋತಿ ಯೋಜನೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಹೊಸ ಅರ್ಜಿಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಮನೆ ಮನೆಗೆ ತಲುಪಿಸುವ ಹೊಸ ಅರ್ಜಿಯಲ್ಲಿ ಸಾರ್ವಜನಿಕರ ಫೋಟೋ ಹಾಗೂ ಇತರೆ ಮಾಹಿತಿ ಸರಿಯಾಗಿದೆಯೇ ಎಂಬುದನ್ನು ಇಂಧನ ಇಲಾಖೆಯ ಸಿಬ್ಬಂದಿ ಖುದ್ದಾಗಿ ಪರಿಶೀಲನೆ ನಡೆಸಬೇಕು. ಯಾವುದೇ ಕಾರಣಕ್ಕೂ ಅರ್ಹರಿಗೆ ಅನ್ಯಾಯವಾಗಬಾರದು ಎಂದು ಸಿಎಂ ತಿಳಿಸಿದರು.