ಅಯೋಧ್ಯೆ, ಜೂ. 29 (DaijiworldNews/AK): ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಎಲ್ಲಾ 8 ಆರೋಪಿಗಳನ್ನು ಸ್ಥಳೀಯ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆರೋಪಿಗಳು ಜುಲೈ 13ರವರೆಗೆ ನ್ಯಾಯಾಂಗ ಬಂಧನದಲ್ಲಿ ಇರಲಿದ್ದಾರೆ. 3 ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಂದು ಎಂಟೂ ಜನ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಅಯೋಧ್ಯೆ ನ್ಯಾಯಾಲಯವು ಅವರಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಿತು.
ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿದ್ದ ದೇಣಿಗೆ ಹಣ ಮತ್ತು ಚಿನ್ನ, ಬೆಳ್ಳಿ ವಸ್ತುಗಳ ದುರುಪಯೋಗವು ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಗರಣದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಅದರ ಸದಸ್ಯ ಅನಿಲ್ ಮಿಶ್ರಾ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇದಕ್ಕೂ ಮುನ್ನ ಶನಿವಾರ, ಈ ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು ಎಂದು ಟ್ರಸ್ಟ್ ಭರವಸೆ ನೀಡಿತ್ತು.
ಚಂಪತ್ ರಾಯ್ ಅವರ ಮಾಜಿ ಚಾಲಕ ಸೇರಿದಂತೆ ದೇಣಿಗೆ ದುರುಪಯೋಗಪಡಿಸಿಕೊಂಡ ಆರೋಪ ಎದುರಿಸುತ್ತಿರುವ 8 ಜನರನ್ನು ಕಳೆದ ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದರು.