ಮುಂಬೈ, ಜೂ. 30 (DaijiworldNews/AK): ವಿದ್ಯಾರ್ಥಿಗಳನ್ನುಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.

ಓರ್ವ ಬಾಲಕ ಇನ್ನೂ ಬಸ್ನಲ್ಲೇ ಸಿಲುಕಿದ್ದಾನೆ. ಆತನ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಯಾಗಿದೆ. ಚೆಂಬೂರಿನ 11ನೇ ನಂಬರ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶಾಲಾ ಬಸ್ನಲ್ಲಿ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಮರ ಇದ್ದಕ್ಕಿದ್ದಂತೆ ಅದರ ಮೇಲೆ ಬಿದ್ದಿದೆ ಎಂದು ತಿಳಿದುಬಂದಿದೆ
ಈ ಅವಘಡದಲ್ಲಿ 10 ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬ ಬಾಲಕ ಬಸ್ಸಿನೊಳಗೆ ಸಿಲುಕಿಕೊಂಡಿದ್ದಾನೆ ಎನ್ನಲಾಗಿದೆ. ರಕ್ಷಣಾ ತಂಡಗಳು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಗೊಂಡ ಮಕ್ಕಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ಸಾಗಿಸಲಾಗಿದೆ.