ನವದೆಹಲಿ, ಜು. 05 (DaijiworldNews/AA): ದೇಶದ ದೆಹಲಿಯಲ್ಲಿ ಇಂದು ಸುರಿದ ಭಾರೀ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆ ಏಕಾಏಕಿ 15 ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ.

10 ದೇಶೀಯ ಮತ್ತು 5 ಅಂತರರಾಷ್ಟ್ರೀಯ ವಿಮಾನಗಳನ್ನು ಜೈಪುರ ಹಾಗೂ ಲಕ್ನೋ ವಿಮಾನ ನಿಲ್ದಾಣಗಳಿಗೆ ತಿರುಗಿಸಲಾಗಿದೆ. ಭಾರೀ ಮಳೆಯ ಕಾರಣ ದೆಹಲಿ ವಿಮಾನ ನಿಲ್ದಾಣದಲ್ಲಿ ಕೆಲಕಾಲ ಕಾರ್ಯಾಚರಣೆ ವ್ಯತ್ಯಯಗೊಂಡಿರುವುದಾಗಿ ವರದಿಯಾಗಿದೆ.
ದೆಹಲಿಯಲ್ಲಿ ಮಧ್ಯಾಹ್ನದವರೆಗೆ ತಾಪಮಾನ 28 ಡಿಗ್ರಿ ಸೆಲ್ಸಿಯಸ್ಗೆ ಇಳಿಕೆಯಾಗಿದ್ದು, ದಿನವಿಡೀ ಗುಡುಗು ಸಹಿತ ಮಳೆ ಸುರಿದಿದೆ. ಕಳೆದ 24 ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ದೆಹಲಿಯ ತಾಪಮಾನ ಇನ್ನೂ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.