ಕಾರವಾರ, ಜು. 09 (DaijiworldNews/TA): ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಧಾರವಾಡದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಕ್ರೂಸರ್ ವಾಹನ ಮತ್ತು ಎದುರಿನಿಂದ ಬರುತ್ತಿದ್ದ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್ನಲ್ಲಿ ಒಟ್ಟು ಒಂಬತ್ತು ಮಂದಿ ಪ್ರಯಾಣಿಸುತ್ತಿದ್ದು, ಅವರಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಅಪಘಾತದಲ್ಲಿ ಗಾಯಗೊಂಡ ಮೂವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಧಾರವಾಡ ಜಿಲ್ಲೆಯವರಾಗಿದ್ದು, ಅವರ ಗುರುತು ಪತ್ತೆ ಮಾಡುವ ಕಾರ್ಯ ನಡೆಯುತ್ತಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಾರಿ ಹಾಗೂ ಕ್ರೂಸರ್ ನಡುವೆ ಅಪಘಾತಕ್ಕೆ ನಿಖರ ಕಾರಣವೇನು ಮತ್ತು ಯಾರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ ಎಂಬುದರ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.