ನವದೆಹಲಿ, ಜು. 14 (DaijiworldNews/AK): ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ ಕೇಂದ್ರ ತನಿಖಾ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
- https://daijiworld.ap-south-1.linodeobjects.com/Linode/img_tv247/14---7-2026AKLAL9.jpg

ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪ್ರಸನ್ನ ಬಿ. ವರಾಳೆ ಅವರನ್ನೊಳಗೊಂಡ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಜಾರ್ಖಂಡ್ ಹೈಕೋರ್ಟ್ ಮೇವು ಹಗರಣದಲ್ಲಿ ಲಾಲೂ ಅವರ ಶಿಕ್ಷೆಯನ್ನು ಅಮಾನತ್ತಿನಲ್ಲಿಟ್ಟು ಜಾಮೀನು ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಮೆಟ್ಟಿಲೇರಿತ್ತು.
ವಿಚಾರಣೆ ನಡೆಸಿದ ಪೀಠ, ಜಾಮೀನು ನೀಡಿ ಈಗಾಗಲೇ ಹಲವು ವರ್ಷಗಳು ಕಳೆದಿರುವುದರಿಂದ ಈಗಿರುವ ವ್ಯವಸ್ಥೆಯನ್ನು ಬದಲಾಯಿಸಲು ನಾವು ಸಿದ್ಧರಿಲ್ಲ ಎಂದು ಸ್ಪಷ್ಟಪಡಿಸಿದೆ.
ಈ ಕ್ರಿಮಿನಲ್ ಮೇಲ್ಮನವಿಗಳು 2018 ರಿಂದಲೇ ಬಾಕಿ ಉಳಿದಿರುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್, ಈ ಹಂತದಲ್ಲಿ ಜಾಮೀನು ರದ್ದುಪಡಿಸುವ ಬದಲು, ಮುಂದಿನ 6 ತಿಂಗಳ ಒಳಗಾಗಿ ಲಾಲೂ ಅವರ ಮೇಲ್ಮನವಿ ಅರ್ಜಿಯನ್ನು ಇತ್ಯರ್ಥಪಡಿಸುವಂತೆ ಜಾರ್ಖಂಡ್ ಹೈಕೋರ್ಟ್ಗೆ ಸೂಚಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿತು.