ಬೆಂಗಳೂರು, ಜು. 14 (DaijiworldNews/TA): ಹೊರವಲಯದ ಆನೇಕಲ್ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಆಪರೇಷನ್ ಥಿಯೇಟರ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ದಟ್ಟ ಹೊಗೆ ಆಸ್ಪತ್ರೆಯೊಳಗೆ ವ್ಯಾಪಿಸುತ್ತಿದ್ದಂತೆ ರೋಗಿಗಳು ಹಾಗೂ ಸಿಬ್ಬಂದಿ ಆತಂಕಗೊಂಡರು.

ಮಾಹಿತಿಯ ಪ್ರಕಾರ, ಆಸ್ಪತ್ರೆಯ ಆಪರೇಷನ್ ಥಿಯೇಟರ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಹೊಗೆ ಆವರಿಸುತ್ತಿದ್ದಂತೆಯೇ ಆಸ್ಪತ್ರೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಕೆಳ ಮಹಡಿಯಲ್ಲಿದ್ದ ರೋಗಿಗಳನ್ನು ಸುರಕ್ಷಿತವಾಗಿ ಹೊರಗೆ ಸ್ಥಳಾಂತರಿಸಿದರು. ಇದರಿಂದ ಯಾವುದೇ ಪ್ರಾಣಾಪಾಯ ಸಂಭವಿಸದೆ ದೊಡ್ಡ ಅನಾಹುತ ತಪ್ಪಿದೆ.
ಅದೃಷ್ಟವಶಾತ್, ಬೆಂಕಿ ಕಾಣಿಸಿಕೊಂಡ ಸಮಯದಲ್ಲಿ ಆಪರೇಷನ್ ಥಿಯೇಟರ್ನಲ್ಲಿ ಯಾವುದೇ ಶಸ್ತ್ರಚಿಕಿತ್ಸೆ ನಡೆಯುತ್ತಿರಲಿಲ್ಲ ಹಾಗೂ ರೋಗಿಗಳೂ ಇರಲಿಲ್ಲ. ಹೀಗಾಗಿ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದಂತಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬಳಿಕ ಆನೇಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬ ಕುರಿತು ತನಿಖೆ ಆರಂಭಿಸಿದ್ದಾರೆ.
ಇನ್ನೊಂದೆಡೆ, ರಾತ್ರಿ ಸುಮಾರು 9 ಗಂಟೆಗೆ ಅವಘಡ ಸಂಭವಿಸಿದ್ದರೂ ಎರಡು ಗಂಟೆಗಳಾದರೂ ತಾಲೂಕು ಆರೋಗ್ಯಾಧಿಕಾರಿ (THO) ರವಿ ಸ್ಥಳಕ್ಕೆ ಆಗಮಿಸದಿರುವುದು ಸ್ಥಳೀಯರು ಹಾಗೂ ಆಸ್ಪತ್ರೆ ಸಿಬ್ಬಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ತುರ್ತು ಪರಿಸ್ಥಿತಿಯಲ್ಲೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸದಿರುವುದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿನ ಅಗ್ನಿ ಸುರಕ್ಷತಾ ಕ್ರಮಗಳು ಮತ್ತು ವಿದ್ಯುತ್ ವ್ಯವಸ್ಥೆಯ ನಿರ್ವಹಣೆ ಕುರಿತು ಮತ್ತೆ ಪ್ರಶ್ನೆಗಳು ಮೂಡಿವೆ.