ಬೆಂಗಳೂರು, ಜು. 14 (DaijiworldNews/AA): ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ 40 ಕಿ.ಮೀ ವೇಗದ ಗಾಳಿ ಬೀಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ನೀಡಿದೆ.

ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯಲ್ಲಿ ಸಾಪೇಕ್ಷ ಆರ್ದ್ರತೆ ಗರಿಷ್ಠ ಮಟ್ಟದಲ್ಲಿರಲಿದೆ. ಇದರಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದ್ದು, ತಂಪಾದ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಮಾರುತಗಳು ಸಕ್ರಿಯವಾಗಿದ್ದು, ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ನಿರಂತರ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಕರಾವಳಿ ಭಾಗದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.