ತಮಿಳುನಾಡು, ಜು. 18 (DaijiworldNews/TA): ಚೆನ್ನೈನಿಂದ ಮಧುರೈಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ತಮಿಳುನಾಡಿನ ಪೆರಂಬಲೂರು ಜಿಲ್ಲೆಯಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಸಮಯೋಚಿತವಾಗಿ ಚಾಲಕ ಬಸ್ನ್ನು ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಗೆ ಕರೆತಂದಿದ್ದರಿಂದ 23 ಮಂದಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆ ಪೆರಂಬಲೂರು ಜಿಲ್ಲೆಯ ಮಂಗಳಮೇಡು ಸಮೀಪದ ಚೆನ್ನೈ–ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗ್ಗೆ ಸುಮಾರು 5.30 ಗಂಟೆ ವೇಳೆಗೆ ನಡೆದಿದೆ. ಬಸ್ನಲ್ಲಿ ಒಟ್ಟು 23 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ನ್ನು ರಸ್ತೆ ಬದಿಗೆ ನಿಲ್ಲಿಸಿ ಎಲ್ಲರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದರು. ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಹೊತ್ತಿ ಉರಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬಸ್ಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದಾರೆ.