ಬೆಂಗಳೂರು, ಜು. 21 (DaijiworldNews/AA): ಕರ್ನಾಟಕದಲ್ಲಿ ಮತ್ತೊಮ್ಮೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಅದರಂತೆ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಜುಲೈ 26ರವರೆಗೆ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಬೀಸುವ ನಿರೀಕ್ಷೆಯಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಇಲಾಖೆ ಸೂಚಿಸಿದೆ.

ಐಎಂಡಿ ಪ್ರಕಟಿಸಿರುವ ಮುನ್ಸೂಚನೆಯ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಭಾರಿ ಅಥವಾ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆಯೂ ಇದೆ. ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಸಂಜೆಯಿಂದಲೇ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಇದರ ಜೊತೆಗೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತುಸು ಕಡಿಮೆ ಇರಲಿದೆ ಎಂದು ಅಂದಾಜಿಸಲಾಗಿದೆ. ಭಾನುವಾರದ ಮುನ್ಸೂಚನೆಗೆ ಹೋಲಿಸಿದರೆ, ಹವಾಮಾನ ಪರಿಸ್ಥಿತಿಯಲ್ಲಿ ಬದಲಾವಣೆಯಾಗಿರುವುದರಿಂದ ರಾಜ್ಯದ ದಕ್ಷಿಣ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದೆ.
ಜುಲೈ 21ರಿಂದ ಮಳೆಯ ತೀವ್ರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗುವ ಸಾಧ್ಯತೆ ಇದ್ದರೂ, ಹವಾಮಾನ ಪರಿಸ್ಥಿತಿ ಇನ್ನೂ ಅನಿಶ್ಚಿತವಾಗಿದ್ದು ನಿರಂತರವಾಗಿ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ. ಮಳೆಯ ತೀವ್ರತೆ ಕಡಿಮೆಯಾದರೂ ಜುಲೈ 29ರವರೆಗೆ ಸಾಮಾನ್ಯ ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆ ಇದೆ.
ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಸಲಹೆ ನೀಡಿದೆ. ವಿಶೇಷವಾಗಿ ಮೀನುಗಾರರು ಹಾಗೂ ಕರಾವಳಿ ಪ್ರದೇಶದ ನಿವಾಸಿಗಳು ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ರಾಜ್ಯದ ಇತರ ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಹೊರಗೆ ಹೋಗುವಾಗ ಅಗತ್ಯ ಸುರಕ್ಷತಾ ಕ್ರಮಗಳನ್ನು ಪಾಲಿಸುವಂತೆ ಇಲಾಖೆ ಮನವಿ ಮಾಡಿದೆ.