ಬೆಂಗಳೂರು,ಜು. 21 (DaijiworldNews/AK): ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಒಟ್ಟು 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳ ಕುರಿತು ಮಾಹಿತಿ ಹಂಚಿಕೊಂಡರು.
ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ ನಿಯಮ-2026ರ ಕರಡು ಅಧಿಸೂಚನೆಯನ್ನು ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದ್ದು, ಅದರಂತೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಅವರು ಪ್ರಕಟಿಸಿದರು.
ಬೆಂಗಳೂರಿನ ಲೋಕಭವನ ಆವರಣದಲ್ಲಿ ರಾಜ್ಯಪಾಲರ ಆಡಳಿತ ಕಚೇರಿ, ವಿಶೇಷ ಕಾರ್ಯದರ್ಶಿಗಳ ವಸತಿ ಗೃಹ ಹಾಗೂ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿಗಳಿಗೆ 27 ಕೋಟಿ ವೆಚ್ಚದ ಯೋಜನೆಯನ್ನು ಸಚಿವ ಸಂಪುಟ ಅನುಮೋದಿಸಿದೆ.