ನವದೆಹಲಿ, ಜು. 23 (DaijiworldNews/TA): ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮತ್ತು ಅದರ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗಳ ನಡುವೆ, ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ವಿದ್ಯಾರ್ಥಿಗಳ ಪರವಾಗಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.

ಯಾವುದೇ ರಾಜಕೀಯ ನಿಲುವು ವ್ಯಕ್ತಪಡಿಸದೇ, ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣ ಮತ್ತು ಭವಿಷ್ಯವೇ ದೇಶದ ಪ್ರಮುಖ ಆದ್ಯತೆಯಾಗಬೇಕು ಎಂದು ಅವರು ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಿಳಿಸಿದ್ದಾರೆ. ತಮ್ಮ ಸಂದೇಶದಲ್ಲಿ ಯುವರಾಜ್ ಸಿಂಗ್, ಪ್ರತಿಯೊಬ್ಬ ಮಗು, ವಿದ್ಯಾರ್ಥಿ, ಮಹಿಳೆ ಮತ್ತು ಪುರುಷರು ಸುರಕ್ಷಿತ ಹಾಗೂ ಶಾಂತಿಯುತ ವಾತಾವರಣದಲ್ಲಿ ಬದುಕಿ, ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳುವ ಅವಕಾಶ ಪಡೆಯಬೇಕು ಎಂದು ಹೇಳಿದ್ದಾರೆ.
"ನಿಮ್ಮ ಯೋಗಕ್ಷೇಮವೇ ಉಜ್ವಲ ಭಾರತದ ಅಡಿಪಾಯ. ಕಾಳಜಿ, ಅವಕಾಶ ಮತ್ತು ಭರವಸೆಯ ಸಮಾಜವನ್ನು ನಿರ್ಮಿಸಲು ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಭಿನ್ನಾಭಿಪ್ರಾಯಗಳಿದ್ದರೂ ಸೌಹಾರ್ದಯುತ ಮಾತುಕತೆಯ ಮೂಲಕವೇ ಉತ್ತಮ ಪರಿಹಾರ ಕಂಡುಕೊಳ್ಳಬಹುದು," ಎಂದು ಅವರು ಕರೆ ನೀಡಿದ್ದಾರೆ. ಈ ಹೇಳಿಕೆಯನ್ನು ಪ್ರತಿಭಟನೆಯ ನಡುವಿನ ಉದ್ವಿಗ್ನ ಪರಿಸ್ಥಿತಿಗೆ ಶಾಂತಿಯುತ ಪರಿಹಾರದ ಪರವಾದ ಮನವಿಯಾಗಿ ವಿಶ್ಲೇಷಿಸಲಾಗುತ್ತಿದೆ.
ಏನಿದು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ? : ದೇಶದ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪದವಿ ಪ್ರವೇಶಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ನಡೆಸುವ NEET-UG ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ, ಅಂಕಗಳ ಅಕ್ರಮ ಮತ್ತು ಪರೀಕ್ಷಾ ಪ್ರಕ್ರಿಯೆಯಲ್ಲಿನ ಗಂಭೀರ ಲೋಪಗಳ ಆರೋಪ ಕೇಳಿಬಂದಿವೆ.
ಪರೀಕ್ಷೆಗೆ ಮುನ್ನವೇ ಹಲವು ರಾಜ್ಯಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದು, ವಾಟ್ಸಾಪ್ ಹಾಗೂ ಟೆಲಿಗ್ರಾಮ್ ಗುಂಪುಗಳ ಮೂಲಕ ಅವು ಹರಿದಾಡಿದ ಆರೋಪವಿದೆ. ಕೆಲ ಮಧ್ಯವರ್ತಿಗಳು ಲಕ್ಷಾಂತರ ರೂಪಾಯಿಗೆ ಪ್ರಶ್ನೆ ಪತ್ರಿಕೆಗಳನ್ನು ಮಾರಾಟ ಮಾಡಿದ್ದಾರೆಯೆಂಬ ಆರೋಪವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದ್ದು, ಈಗಾಗಲೇ ಹಲವರನ್ನು ಬಂಧಿಸಲಾಗಿದೆ.
ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳು :
ದೆಹಲಿಯ ಜಂತರ್ ಮಂತರ್ ಸೇರಿದಂತೆ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಮತ್ತು ಸಾಮಾಜಿಕ ಸಂಘಟನೆಗಳು ಪ್ರತಿಭಟನೆ ಮುಂದುವರಿಸಿವೆ.
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
- ಪರೀಕ್ಷಾ ವ್ಯವಸ್ಥೆಯ ವೈಫಲ್ಯದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
-ರಾಷ್ಟ್ರೀಯ ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ತರಬೇಕು.
-ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಎಲ್ಲಾ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.
-ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಬಲಿಷ್ಠ ವ್ಯವಸ್ಥೆ ಜಾರಿಗೆ ತರಬೇಕು.
ಪೊಲೀಸ್ ಕ್ರಮದ ವಿರುದ್ಧವೂ ಆಕ್ರೋಶ : ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆ ಹಾಗೂ 'ಸಂಸದ್ ಚಲೋ' ಮೆರವಣಿಗೆಯ ವೇಳೆ ವಿದ್ಯಾರ್ಥಿಗಳ ಮೇಲೆ ನಡೆದಿದ್ದರೆಂದು ಹೇಳಲಾಗಿರುವ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗದ ವಿರುದ್ಧವೂ ಪ್ರತಿಭಟನೆಗಳು ಮತ್ತಷ್ಟು ತೀವ್ರಗೊಂಡಿವೆ. ಈ ಹಿನ್ನೆಲೆಯಲ್ಲಿ ಯುವರಾಜ್ ಸಿಂಗ್ ಅವರ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಗಮನ ಸೆಳೆದಿದ್ದು, ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಉಳಿಸಿಕೊಳ್ಳಲು ಸರ್ಕಾರ ಮತ್ತು ಪ್ರತಿಭಟನಾಕಾರರು ಶಾಂತಿಯುತ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಬೇಕೆಂದು ಅವರು ಪರೋಕ್ಷವಾಗಿ ಕರೆ ನೀಡಿದ್ದಾರೆ.