ನವದೆಹಲಿ,24 (DaijiworldNews/AK): ಆಂಧ್ರಪ್ರದೇಶ ಮತ್ತು ಕರ್ನಾಟಕ ನಡುವಿನ ರೈಲು ಸಂಪರ್ಕ ಬಲಪಡಿಸುವ ಗುರಿಯನ್ನು ಹೊಂದಿರುವ ನಾಲ್ಕು ಹೊಸ ರೈಲು ಮಾರ್ಗಗಳ ನಿರ್ಮಾಣಕ್ಕೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಶ್ವಿನಿ ವೈಷ್ಣವ್, ಪ್ರಮುಖ ಆರ್ಥಿಕ ಕಾರಿಡಾರ್ನಲ್ಲಿ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗಗಳ ನಿರ್ಮಾಣವೂ ಈ ನಿರ್ಧಾರದಲ್ಲಿ ಸೇರಿದೆ.
ಕರ್ನಾಟಕ ಮತ್ತು ಆಂಧ್ರಪ್ರದೇಶದ ಮೂರು ಜಿಲ್ಲೆಗಳನ್ನು ಒಳಗೊಂಡ ಮಲ್ಟಿಟ್ರ್ಯಾಕಿಂಗ್ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಇದು ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವನ್ನು ಸುಮಾರು 46 ಕಿ.ಮೀ.ಗಳಷ್ಟು ಹೆಚ್ಚಿಸುತ್ತದೆ ಎಂದು ತಿಳಿಸಿದ್ದಾರೆ.
ಯೋಜನೆಯ ಅಂದಾಜು ವೆಚ್ಚ 1,264 ಕೋಟಿ ರೂ.ಗಳಾಗಿದ್ದು, 2028-29ರವರೆಗೆ ಪೂರ್ಣಗೊಳ್ಳಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ಇಂದು ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಬಳ್ಳಾರಿ – ಗುಂತಕಲ್ ವಿಭಾಗದ 3 ನೇ ಮತ್ತು 4 ನೇ ಮಾರ್ಗಕ್ಕೆ ಅನುಮೋದನೆ ನೀಡಿದೆ.