ಮೈಸೂರು, ಜು. 25 (DaijiworldNews/AA): ಕಾಂಗ್ರೆಸ್ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವನ್ನು ಮುಂದಿಟ್ಟುಕೊಂಡು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ ಆರೋಪಿಸಿದ್ದಾರೆ.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಪ್ರತಿಭಟನೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಹೊರಟಿದೆ. ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಕೆಲಸವಾಗಿದೆ. ಇದು ಕಾಂಗ್ರೆಸ್ನ ವ್ಯವಸ್ಥಿತ ಷಡ್ಯಂತ್ರವಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ನೆರೆಯ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳದಲ್ಲಿ ಆದಂತೆ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನತೆ ಇದಕ್ಕೆ ಮಣಿಯುವುದಿಲ್ಲ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ. ಬೇರೆ ದೇಶದಲ್ಲಿ ಅರಾಜಕತೆ ಉಂಟು ಮಾಡಿದಂತೆ ನಮ್ಮ ದೇಶದಲ್ಲಿ ಮಾಡಲು ಸಾಧ್ಯವಿಲ್ಲ" ಎಂದು ಕಿಡಿಕಾರಿದ್ದಾರೆ.