ನವದೆಹಲಿ, ಜು. 25 (DaijiworldNews/AA): 'ಇದು ಪ್ರಜಾಪ್ರಭುತ್ವದ ಗೆಲುವು' ಎಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಪ್ರತಿಕ್ರಿಯಿಸಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, "ಇದು ಪ್ರಜಾಪ್ರಭುತ್ವದ ಗೆಲುವು. ಬೀದಿಗಳಿಂದ ನೇರವಾಗಿ ಪ್ರಜಾಪ್ರಭುತ್ವ. ಶಾಂತಿ, ತಾಳ್ಮೆ ಮತ್ತು ಪರಿಶ್ರಮದ ಗೆಲುವು ಎಂದು ವಾಂಗ್ಚುಕ್ ತಿಳಿಸಿದ್ದಾರೆ. ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆಯನ್ನು ಮುನ್ನಡೆಸುತ್ತಿರುವ ದೇಶದ ಸಿಜೆಪಿ, ಝೆನ್-ಜಿ ಹೋರಾಟಗಾರರಿಗೂ ಅಭಿನಂದನೆ" ಎಂದು ಧನ್ಯವಾದ ತಿಳಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆಗೆ ಒತ್ತಾಯಿಸಿ ಜೂನ್ 28 ರಂದು ನಡೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಯಲ್ಲಿ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ನಡೆಸಿದರು. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ, ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಕಾನೂನು ಕ್ರಮ ಹಿಂತೆಗೆದುಕೊಳ್ಳುವುದು ಮತ್ತು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದ ಬಳಿಕ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದರು.