ಬೆಂಗಳೂರು, ಆ. 23 (DaijiworldNews/TA): ಕರ್ನಾಟಕದಲ್ಲಿ H1N1 ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ.

ರಾಜ್ಯದಲ್ಲಿ ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ ಹರಡುತ್ತಿವೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ H1N1 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಸಣ್ಣ ಮಕ್ಕಳು, ವೃದ್ಧರು ಹಾಗೂ ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಜ್ವರ, ಕೆಮ್ಮು, ಗಂಟಲು ನೋವು ಸೇರಿದಂತೆ ಸೋಂಕಿನ ಲಕ್ಷಣಗಳು ತೀವ್ರವಾಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ಇಲಾಖೆ ಎಚ್ಚರಿಸಿದೆ.
ಹೆಚ್ಚುತ್ತಿರುವ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಆಸ್ಪತ್ರೆಗಳಲ್ಲಿ ಮಾದರಿ ಪರೀಕ್ಷಾ ಕಿಟ್ಗಳು, ಟ್ಯಾಮಿಫ್ಲೂ ಸೇರಿದಂತೆ ಅಗತ್ಯ ಔಷಧಗಳು ಹಾಗೂ ಐಸಿಯು ಹಾಸಿಗೆಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಆಡಳಿತ ಮಂಡಳಿಗಳಿಗೆ ನಿರ್ದೇಶನ ನೀಡಲಾಗಿದೆ.
ತೀವ್ರ ಜ್ವರ, ನಿರಂತರ ಕೆಮ್ಮು, ಗಂಟಲು ನೋವು, ಉಸಿರಾಟದ ತೊಂದರೆ ಅಥವಾ ತೀವ್ರ ದೇಹದಂಡನೆ ಕಾಣಿಸಿಕೊಂಡರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಸ್ವಯಂ ವೈದ್ಯಕೀಯ ಮಾಡಿಕೊಳ್ಳುವುದನ್ನು ತಪ್ಪಿಸುವಂತೆ ಸೂಚಿಸಿರುವ ಅಧಿಕಾರಿಗಳು, ಜನನಿಬಿಡ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು, ಕೈಗಳನ್ನು ಆಗಾಗ್ಗೆ ಸ್ವಚ್ಛಗೊಳಿಸುವುದು ಹಾಗೂ ಸೋಂಕಿನ ಲಕ್ಷಣಗಳಿರುವವರಿಂದ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಸಲಹೆ ನೀಡಿದ್ದಾರೆ.