ನವದೆಹಲಿ, ಸೆ. 02 (DaijiworldNews/TA): ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನಕ್ಕೆ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಇದರ ಅಂಗವಾಗಿ ‘ಸೇವಾ ಸಂಕಲ್ಪ’ ಹೆಸರಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲು ಪಕ್ಷ ಮುಂದಾಗಿದೆ.

ಅಭಿಯಾನದ ರೂಪುರೇಷೆ ಹಾಗೂ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲು ನವದೆಹಲಿಯಲ್ಲಿ ಬಿಜೆಪಿ ಪ್ರಮುಖರ ಮಹತ್ವದ ಸಭೆ ನಡೆಯಲಿದೆ. ಬಿಜೆಪಿ ಹಾಗೂ ಎನ್ಡಿಎ ಆಡಳಿತವಿರುವ ರಾಜ್ಯಗಳ ಆಯ್ದ ಮುಖ್ಯಮಂತ್ರಿಗಳು ಮತ್ತು ಸಚಿವರು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ನಿವಾಸದಲ್ಲಿ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದ್ದು, ದೇಶದ ವಿವಿಧ ಬಿಜೆಪಿ ಆಡಳಿತದ ರಾಜ್ಯಗಳ ಸುಮಾರು 25 ಮುಖ್ಯಮಂತ್ರಿಗಳು ಹಾಗೂ ಸಚಿವರು ಇದರಲ್ಲಿ ಭಾಗವಹಿಸುವ ಸಾಧ್ಯತೆ ಇದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಪ್ರಮುಖ ಸಾಧನೆಗಳು, ಜನಪರ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳನ್ನು ದೇಶದ ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ಕುರಿತು ಕಾರ್ಯಾಗಾರದಲ್ಲಿ ತಂತ್ರಗಾರಿಕೆ ರೂಪಿಸಲಾಗುತ್ತದೆ. ‘ಸೇವಾ ಸಂಕಲ್ಪ’ ಅಭಿಯಾನವನ್ನು ದೇಶಾದ್ಯಂತ ಪರಿಣಾಮಕಾರಿಯಾಗಿ ನಡೆಸುವ ಬಗ್ಗೆಯೂ ನಾಯಕರು ಚರ್ಚೆ ನಡೆಸಲಿದ್ದಾರೆ. ಕಾರ್ಯಾಗಾರ ಮುಕ್ತಾಯಗೊಂಡ ಬಳಿಕ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆಯೂ ಇದೆ.
ಮೋದಿ ಅವರ ಸಾರ್ವಜನಿಕ ಜೀವನದ 25ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ಮುಂದಿನ ಒಂದು ತಿಂಗಳ ಅವಧಿಯಲ್ಲಿ ಒಟ್ಟು 17 ಕಾರ್ಯಕ್ರಮಗಳನ್ನು ಆಯೋಜಿಸಲು ಬಿಜೆಪಿ ಯೋಜನೆ ರೂಪಿಸಿದೆ. ಸೇವೆ, ಅಭಿವೃದ್ಧಿ ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವುದು ಈ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ.