ನವದೆಹಲಿ, ಸೆ. 03 (DaijiworldNews/AA): ಕಾನೂನು ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸಲು ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದೆ.

ಹೈದರಾಬಾದ್ನ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಸಿಜೆಐ ಭಾಗವಹಿಸುವಿಕೆಯ ಪ್ರಸ್ತಾವನೆ ವಿರೋಧಿಸಿದ ವಿದ್ಯಾರ್ಥಿಗಳ ವಿರುದ್ಧ ಬಿಸಿಐ ಕೈಗೊಂಡ ಕ್ರಮ ವಿವಾದಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಗುರುವಾರ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ಪೀಠ ನಡೆಸಿದೆ.
ವಿದ್ಯಾರ್ಥಿಗಳು ವಕೀಲರಾಗಿ ಕಾನೂನು ವೃತ್ತಿಯನ್ನು ನಿಯಂತ್ರಿಸುವ ಶಾಸನಬದ್ಧ ಚೌಕಟ್ಟಿನ ವ್ಯಾಪ್ತಿಗೆ ಬರುವ ಮುನ್ನ ಅವರ ಮೇಲೆ ನಿಯಂತ್ರಣ ಸಾಧಿಸಲು ಬಿಸಿಐಗೆ ಸಾಧ್ಯವಿಲ್ಲ. ವಿದ್ಯಾರ್ಥಿಗಳ ನಡವಳಿಕೆಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳುವುದಿದ್ದರೂ, ಅದು ಆಯಾ ಶಿಕ್ಷಣ ಸಂಸ್ಥೆಯು ತನ್ನ ನಿಯಮಗಳು ಮತ್ತು ನಿಬಂಧನೆಗಳ ಅಡಿಯಲ್ಲಿ ಪರಿಗಣಿಸಬೇಕಾದ ವಿಷಯವಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.