ಬೆಂಗಳೂರು,ಸೆ. 03 (DaijiworldNews/AK): ಕೆಪಿಎಸ್ಸಿ ನೇಮಕಾತಿ ಹಗರಣದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಗ್ಯಾನೇಂದ್ರ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಹಗರಣ ಸಂಬಂಧ ಸಿಐಡಿ ಕಸ್ಟಡಿಯಲ್ಲಿರುವ ಐಎಎಸ್ ಅಧಿಕಾರಿಯನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ಹಗರಣ ಬೆಳಕಿಗೆ ಬರುತ್ತಿದ್ದಂತೆ ಐಎಎಸ್ ಅಧಿಕಾರಿ ನಾಪತ್ತೆಯಾಗಿದ್ದರು. ಬಳಿಕ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಅಧಿಕಾರಿಯನ್ನು ಸಿಐಡಿ ಕಸ್ಟಡಿಗೆ ಕೋರ್ಟ್ ನೀಡಿತು.
ಪ್ರಕರಣ ಸಂಬಂಧ ಈಗ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ಗೂ ಸಿಐಡಿ ನೋಟಿಸ್ ನೀಡಿದೆ. ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೊಟ್ಟಿದೆ.