ಬೆಂಗಳೂರು, ಸೆ. 08 (DaijiworldNews/TA): ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಬೆಳ್ಳಂಬೆಳಗ್ಗೆ ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ರೈತರು, ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು. ಮೂರು ಗಂಟೆಗೂ ಹೆಚ್ಚು ಕಾಲ ಮಾರುಕಟ್ಟೆಯಲ್ಲಿ ಸುತ್ತಾಡಿದ ಅವರು, ಅಲ್ಲಿನ ಮೂಲಸೌಕರ್ಯ ಹಾಗೂ ಬಾಲ ಕಾರ್ಮಿಕರ ಸಮಸ್ಯೆ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿದ ಮುಖ್ಯಮಂತ್ರಿ, ಈರುಳ್ಳಿ, ಆಲೂಗಡ್ಡೆ, ಬೆಳ್ಳುಳ್ಳಿ ಸೇರಿದಂತೆ ವಿವಿಧ ತರಕಾರಿ ಮಾರುಕಟ್ಟೆಗಳನ್ನು ವೀಕ್ಷಿಸಿದರು. ಈ ವೇಳೆ ರೈತರು ಹಾಗೂ ವರ್ತಕರೊಂದಿಗೆ ನೇರವಾಗಿ ಮಾತುಕತೆ ನಡೆಸಿ ಮಾರುಕಟ್ಟೆಯಲ್ಲಿನ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು.

ಮಾರುಕಟ್ಟೆ ಪರಿಶೀಲನೆ ನಡುವೆ ಡಿ.ಕೆ. ಶಿವಕುಮಾರ್ ಅವರು ಅಲ್ಲಿನ ಸಣ್ಣ ಹೋಟೆಲ್ಗೆ ತೆರಳಿ ತಿಂಡಿ ಸೇವಿಸಿದರು. ಬಳಿಕ ಮಾರುಕಟ್ಟೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ವ್ಯಾಪಾರಿಗಳು ಹಾಗೂ ಕೂಲಿ ಕಾರ್ಮಿಕರೊಂದಿಗೆ ಮಾತನಾಡಿದರು. ಮಹಿಳಾ ವ್ಯಾಪಾರಿಗಳೊಂದಿಗೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿದ ಸಿಎಂ, ಮಾರುಕಟ್ಟೆಯ ವಾಸ್ತವ ಪರಿಸ್ಥಿತಿಯನ್ನು ಖುದ್ದಾಗಿ ತಿಳಿದುಕೊಳ್ಳಲು ಹೆಚ್ಚಿನ ಸಮಯ ಮೀಸಲಿಟ್ಟರು.
ಮಾರುಕಟ್ಟೆ ಪರಿಶೀಲನೆ ವೇಳೆ ಸುಮಾರು 7ರಿಂದ 10 ವರ್ಷ ವಯಸ್ಸಿನ ಮಕ್ಕಳು ಕೆಲಸ ಮಾಡುತ್ತಿರುವುದನ್ನು ಮುಖ್ಯಮಂತ್ರಿ ಗಮನಿಸಿದರು. ಇದನ್ನು ಕಂಡು ಬೇಸರ ವ್ಯಕ್ತಪಡಿಸಿದ ಅವರು, ಬಾಲ ಕಾರ್ಮಿಕ ಪದ್ಧತಿ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರು ಹಾಗೂ ಮಕ್ಕಳಿಂದ ಕೆಲಸ ಮಾಡಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಂಜೆಯೊಳಗೆ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಬಾಲ ಕಾರ್ಮಿಕರ ವಿಚಾರದಲ್ಲಿ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಸಂಬಂಧಪಟ್ಟ ಸರ್ಕಲ್ ಇನ್ಸ್ಪೆಕ್ಟರ್, ಡಿವೈಎಸ್ಪಿ/ಎಸಿಪಿ ಹಾಗೂ ಡಿಸಿಪಿ ಮಟ್ಟದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಂಜೆಯೊಳಗೆ ಬಾಲ ಕಾರ್ಮಿಕರ ಸಮಸ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಮಾನತು ಸೇರಿದಂತೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ.
ಎಪಿಎಂಸಿಯಲ್ಲಿ ಹಲವು ಮೂಲಭೂತ ಸೌಲಭ್ಯಗಳ ಕೊರತೆ ಇರುವುದನ್ನು ಗಮನಿಸಿದ ಸಿಎಂ, ರೈತರು ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದರು. ಉತ್ತರ ಭಾರತ ಸೇರಿದಂತೆ ವಿವಿಧ ರಾಜ್ಯಗಳಿಂದ ತರಕಾರಿಗಳು ಮಾರುಕಟ್ಟೆಗೆ ಬರುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ರೈತರು ಹಾಗೂ ಕಾರ್ಮಿಕರಿಗೆ ಸೂಕ್ತ ನ್ಯಾಯ ದೊರೆಯಬೇಕಿದೆ ಎಂದು ಅವರು ಹೇಳಿದ್ದಾರೆ. ರೈತರು, ಕೂಲಿ ಕಾರ್ಮಿಕರು ಮತ್ತು ವ್ಯಾಪಾರಿಗಳ ಸಮಸ್ಯೆಗಳಿಗೆ ಸ್ಪಂದಿಸುವುದರ ಜೊತೆಗೆ ಮಾರುಕಟ್ಟೆಯಲ್ಲಿನ ಬಾಲ ಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೂರು ಗಂಟೆಗೂ ಹೆಚ್ಚು ಕಾಲ ಎಪಿಎಂಸಿ ಮಾರುಕಟ್ಟೆಯಲ್ಲೇ ಇದ್ದ ಮುಖ್ಯಮಂತ್ರಿ, ವಿವಿಧ ಮಾರುಕಟ್ಟೆ ವಿಭಾಗಗಳಿಗೆ ತೆರಳಿ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಅಧಿಕಾರಿಗಳು ಮತ್ತು ಮಾರುಕಟ್ಟೆ ಆಡಳಿತಕ್ಕೆ ಹಲವು ನಿರ್ದೇಶನಗಳನ್ನು ನೀಡಿದ್ದಾರೆ.