ಕೊರ್ಬಾ, ಸೆ. 09 (DaijiworldNews/TA): ಇಂಟರ್ನೆಟ್ ಸಂಪರ್ಕದಲ್ಲಿ ಪದೇಪದೇ ಅಡಚಣೆ ಉಂಟಾಗಿದ್ದರಿಂದ ಬೇಸರಗೊಂಡ 52 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ಛತ್ತೀಸ್ಗಢದ ಕೊರ್ಬಾ ಜಿಲ್ಲೆಯಲ್ಲಿ ನಡೆದಿದೆ. ಕಾರ್ತಲಾ ಪೊಲೀಸ್ ಠಾಣೆ ವ್ಯಾಪ್ತಿಯ ಕೆರಕಚಾರ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತರನ್ನು ಮಂಗ್ಲೋ ಬಾಯಿ ಸಾರಥಿ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಶನಿವಾರ ಮನೆಯಲ್ಲಿ ಮಂಗ್ಲೋ ಬಾಯಿ ಕೀಟನಾಶಕ ಸೇವಿಸಿದ್ದರು. ತೀವ್ರ ಅಸ್ವಸ್ಥಗೊಂಡ ಅವರನ್ನು ಮೊದಲು ಕಾರ್ತಲಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಕುಟುಂಬಸ್ಥರ ಹೇಳಿಕೆಯಂತೆ, ಮಂಗ್ಲೋ ಬಾಯಿ ಮೊಬೈಲ್ನಲ್ಲಿ ರೀಲ್ಸ್ ವೀಕ್ಷಿಸುವ ಅಭ್ಯಾಸ ಹೊಂದಿದ್ದರು. ಘಟನೆ ನಡೆದ ದಿನವೂ ರೀಲ್ಸ್ ನೋಡುತ್ತಿದ್ದ ವೇಳೆ ಇಂಟರ್ನೆಟ್ ಸಂಪರ್ಕ ಪದೇಪದೇ ಕಡಿತಗೊಂಡಿದೆ. ಇದರಿಂದ ಅಸಮಾಧಾನಗೊಂಡ ಅವರು ಮೊಬೈಲ್ ಫೋನ್ ಅನ್ನು ನೆಲಕ್ಕೆ ಎಸೆದು ಒಡೆದು ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಮನೆಯಲ್ಲಿದ್ದ ಕೀಟನಾಶಕ ಸೇವಿಸಿದ್ದರು ಎನ್ನಲಾಗಿದೆ.
ಮಹಿಳೆಯ ಸ್ಥಿತಿ ಹದಗೆಡುತ್ತಿರುವುದನ್ನು ಅವರ 17 ವರ್ಷದ ಮಗಳು ಗಮನಿಸಿ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡಿದ್ದಾಳೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಕೊರ್ಬಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಘಟನೆ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.