ಶ್ರೀನಗರ, ಸೆ.19 (DaijiworldNews/TA): ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಬಿಎಸ್ಎಫ್ ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಐವರು ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಬಿಎಸ್ಎಫ್ ಬೆಂಗಾವಲು ಪಡೆಗೆ ಸೇರಿದ ವಾಹನ ಜಮ್ಮು ಕಡೆಗೆ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದಲ್ಲಿ ಎಸ್ಐ ಘರ್ ಸಿಂಗ್ ಹಾಗೂ ಕಾನ್ಸ್ಟೆಬಲ್ಗಳಾದ ಸುನಿಲ್ ಕುಮಾರ್, ಪಾರ್ಶುತಮ್ ಕುಮಾರ್ ಮತ್ತು ಚಂದನ್ ಯಾದವ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದಲ್ಲಿ ಗಾಯಗೊಂಡಿರುವ ವಾಹನದ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಾಲಕ ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದು, ಅಪಘಾತದ ಕಾರಣದ ಬಗ್ಗೆ ಪರಿಶೀಲನೆ ಮುಂದುವರಿದಿದೆ.