ನವದೆಹಲಿ, ಏ 05 (DaijiworldNews/AA): ಭಾರತೀಯ ರಿಸರ್ವ್ ಬ್ಯಾಂಕ್ ನ ಹಣಕಾಸು ನೀತಿ ಸಮಿತಿಯು ಸತತ 7ನೇ ಬಾರಿಯೂ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರ ತಿಳಿಸಿದ್ದಾರೆ.
3 ದಿನಗಳ ಕಾಲ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹಣಕಾಸು ನೀತಿ ಸಮಿತಿಯ ಸಭೆ ಇಂದು ಬೆಳಗ್ಗೆ ಮುಕ್ತಾಯವಾಗಿದೆ. ಈ ಸಭೆಯಲ್ಲಿ ಈ ಬಾರಿಯೂ ರೆಪೋ ದರವನ್ನು ಶೇ.6.5ನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಒಮ್ಮತದಿಂದ ನಿರ್ಧರಿಸಲಾಗಿದೆ ಎಂದು ಶಕ್ತಿಕಾಂತ್ ದಾಸ್ ಹೇಳಿದ್ದಾರೆ.
ರಿವರ್ಸ್ ರೆಪೋ ದರ ಶೇ.3.5ರಲ್ಲಿ ಮುಂದುವರಿಯಲಿದ್ದು, ಹಣದುಬ್ಬರ ನಿಯಂತ್ರಣಕ್ಕೆ ಕಡಿವಾಣ ಹಾಕಲು ಎಲ್ಲಾ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಆರ್ಥಿಕ ಸ್ಥಿತಿಗತಿಯನ್ನು ಸೂಕ್ಷ್ಮವಾಗಿ ಪರಿಶೀಲನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.