ಮುಂಬೈ, ಅ.31 (DaijiworldNews/AK): ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೂರು ಪಂದ್ಯಗಳ ಟೆಸ್ಟ್ ಸರಣಿಯ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟೆಂಬಾ ಬವುಮಾ ನಾಯಕತ್ವದ ದಕ್ಷಿಣ ಆಫ್ರಿಕಾ ತಂಡ ಭರ್ಜರಿ ಪ್ರದರ್ಶನ ನೀಡಿದೆ.

ಕೇಪ್ಟೌನ್ನಲ್ಲಿ ನಡೆದ ಪಂದ್ಯದಲ್ಲಿ ಕಾಂಗರೂ ಪಡೆಗೆ ಸೋಲಿನ ರುಚಿ ತೋರಿಸಿದ ಹರಿಣಗಳ ಪಡೆ 176 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು 2-1 ಅಂತರದಲ್ಲಿ ತನ್ನದಾಗಿಸಿಕೊಂಡಿದೆ. ಅಷ್ಟೇ ಅಲ್ಲದೆ, ಈ ಗೆಲುವಿನ ಪರಿಣಾಮವಾಗಿ 2025-27ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲೂ ಭಾರೀ ಬದಲಾವಣೆಯಾಗಿದೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ದಕ್ಷಿಣ ಆಫ್ರಿಕಾ ಇದೀಗ ಎರಡನೇ ಸ್ಥಾನಕ್ಕೇರಿದೆ.
ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ಫಲಿತಾಂಶದ ಬಳಿಕ WTC 2025-27ರ ಅಂಕಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡ 2 ಸ್ಥಾನ ಕುಸಿದು ಮೂರನೇ ಸ್ಥಾನಕ್ಕೆ ತಲುಪಿದೆ. ಕಾಂಗರೂ ಪಡೆಯ ಗೆಲುವಿನ ಶೇಕಡಾವಾರು ಪ್ರಮಾಣ ಇದೀಗ 69.23ಕ್ಕೆ ಇಳಿದಿದೆ. ಇತ್ತ ಈ ಟೆಸ್ಟ್ ಸರಣಿಯಲ್ಲಿ ಎರಡು ಪಂದ್ಯಗಳನ್ನು ಗೆದ್ದಿರುವ ದಕ್ಷಿಣ ಆಫ್ರಿಕಾ ತಂಡ ಎರಡನೇ ಸ್ಥಾನಕ್ಕೇರಿದೆ. ಬವುಮಾ ಪಡೆಯ ಗೆಲುವಿನ ಶೇಕಡಾವಾರು ಪ್ರಮಾಣ 71.43ಕ್ಕೆ ಹೆಚ್ಚಳವಾಗಿದೆ.
2025-27ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಕ್ಷಿಣ ಆಫ್ರಿಕಾ ಈವರೆಗೆ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾ ಆಡಿರುವ 13 ಪಂದ್ಯಗಳಲ್ಲಿ 9ರಲ್ಲಿ ಗೆಲುವು ದಾಖಲಿಸಿದ್ದು, 4 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಕ್ತಾಯದ ಬಳಿಕ ನ್ಯೂಜಿಲೆಂಡ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಕಿವೀಸ್ ಪಡೆ ಸದ್ಯ ಶೇ.72.22ರ ಗೆಲುವಿನ ಪ್ರಮಾಣ ಹೊಂದಿದೆ.
ಇನ್ನು ಭಾರತ ತಂಡ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಟೀಂ ಇಂಡಿಯಾ ಈವರೆಗೆ 2025-27ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಒಟ್ಟು 11 ಪಂದ್ಯಗಳನ್ನು ಆಡಿದ್ದು, 5ರಲ್ಲಿ ಗೆಲುವು ಸಾಧಿಸಿದೆ. 4 ಪಂದ್ಯಗಳಲ್ಲಿ ಸೋಲು ಕಂಡಿದ್ದರೆ, 2 ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ. ಭಾರತದ ಗೆಲುವಿನ ಶೇಕಡಾವಾರು ಪ್ರಮಾಣ ಶೇ.51.52ರಷ್ಟಿದೆ.